ಸೋಮವಾರಪೇಟೆ, ಅ. 7: ಪ್ರತಿನಿತ್ಯ ಪಟ್ಟಣವನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಕರೆ ನೀಡಿದರು.
ಪಟ್ಟಣ ಪಂಚಾಯಿತಿ ವತಿಯಿಂದ ಪ.ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೌರ ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣಕೊಡಿಸಿ ಇತರರಂತೆ ಬದುಕು ಕಟ್ಟಿಕೊಳ್ಳಬೇಕು ಎಂದು ಅವರು ಹೇಳಿದರು.
ಸರಕಾರವು ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇದರೊಂದಿಗೆ ಬೆಳಗಿನ ಉಪಾಹಾರವನ್ನು ನೀಡುವ ಸೌಲಭ್ಯವನ್ನು ನೀಡಿದೆ. ಆಶುಚಿತ್ವ ಉಂಟಾಗದಂತೆ ಎಚ್ಚರಿಕೆ ವಹಿಸಿದರೆ ಸಾಂಕ್ರಮಿಕ ರೋಗವನ್ನು ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಪಟ್ಟಣದ ಶುಚಿತ್ವವನ್ನು ಕಾಪಾಡುವದರೊಂದಿಗೆ ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು ಎಂದರು.
ಮುಖ್ಯ ಅಥಿತಿಗಳಾಗಿ ಪಾಲ್ಗೊಂಡಿದ್ದ ತಹಶೀಲ್ದಾರ್ ಮಹೇಶ್ ಮಾತನಾಡಿ ಪೌರ ಕಾರ್ಮಿಕರು ಮದ್ಯಪಾನದ ಚಟವನ್ನು ದೂರಮಾಡಿ ಅದೇ ಹಣದಲ್ಲಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡುವತ್ತ ಗಮನಹರಿಸಬೇಕು. ತಮ್ಮ ಜೀವನದ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಮತ್ತೋರ್ವ ಮುಖ್ಯ ಅತಿಥಿಯಾಗಿದ್ದ ವೃತ್ತ ನಿರೀಕ್ಷಕ ಪರಶಿವ ಮೂರ್ತಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪಟ್ಟಣ ಪ್ರದೇಶಗಳಲ್ಲಿ ಕಸದ ಸಮಸ್ಯೆ ಎದುರಾಗುತ್ತಿದೆ. ಪೌರ ಕಾರ್ಮಿಕರು ಕಸಗಳನ್ನು ಸಂಗ್ರಹಿಸುವಾಗ ಕಡ್ಡಾಯವಾಗಿ ಕೈಚೀಲವನ್ನು ಧರಿಸಬೇಕು. ಸರಕಾರದಿಂದ ದೊರಕುವ ಕೌಶಲ್ಯ ಅಭಿವೃದ್ದಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಷ್ಮಾ ಶೆಟ್ಟಿ, ಪಂಚಾಯಿತಿ ಸದಸ್ಯರು, ಮುಖ್ಯಾಧಿಕಾರಿ ಪಿ ನಾಚಪ್ಪ, ಆರೋಗ್ಯ ನಿರೀಕ್ಷಕ ಉದಯ ಕುಮಾರ್, ಪೌರ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಪಿಯೂಸ್ ಡಿಸೋಜ, ತಾಲೂಕು ಘಟಕದ ಪ್ರಮುಖರಾದ ದಾಮೋದರ ಗಟ್ಟಿ, ವೆಂಕಟರಮಣ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಹಿರಿಯ ಪೌರಕಾರ್ಮಿಕರಾದ ಕಾಳಮ್ಮ ಮತ್ತು ರಾಮು ಅವರನ್ನು ಸನ್ಮಾನಿಸಲಾಯಿತು. ಪೌರ ಕಾರ್ಮಿಕರಿಗೆ ಆಟೋಟ ಸ್ಪರ್ಧೆ ಏರ್ಪಡಿಸಲಾಯಿತು.