ಮೂರ್ನಾಡು, ಅ. 8: ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಆಯೋಜಿಸಲಾದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಏಳು ದಿನಗಳ ಕಾಲ ಆಯೋಜಿಸಲಾದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್ ಮಾತನಾಡಿ ವಿದ್ಯಾರ್ಥಿಗಳು ಶೈಕ್ಷಣಿಕ ವಾತಾವರಣದಿಂದ ಇತರ ಮನರಂಜನಾತ್ಮಕ ಚಟುವಟಿಕೆಗಳತ್ತ ಇಂದು ಹೆಚ್ಚಿನ ಆಸಕ್ತಿ ವಹಿಸುತ್ತಿದಾರೆ. ಪೋಷಕರು ತಮ್ಮ ಮಕ್ಕಳಿಗೆ ಎಲ್ಲಾ ಸೌಕರ್ಯ, ಸೌಲಭ್ಯಗಳನ್ನು ನೀಡುತ್ತಿದ್ದು ಇದರ ಪರಿಣಾಮ ಕಲಿಕೆಯ ಬಗ್ಗೆ ಆಸಕ್ತಿ ಕಳೆದು ಕೊಳ್ಳುತ್ತಿದ್ದಾರೆ. ಎನ್ಎಸ್ಎಸ್ ವಿದ್ಯಾರ್ಥಿಗಳು ವಿಶಾಲ ಮನೋಭಾವ ಹಾಗೂ ಸಾಮಾಜಿಕ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಮಡಿಕೇರಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ, ಸಂಸ್ಕಾರ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿ ಎನ್ನಿಸಿಕೊಳ್ಳಬೇಕು. ಎಂದರು.
ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಬಾಚೇಟ್ಟಿರ ಜಿ. ಮಾದಪ್ಪ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ, ಹಾಕತ್ತೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಚಂದ್ರ, ಎಸ್ಡಿಎಂಸಿ ಅಧ್ಯಕ್ಷ ಅಬೂಬ್ಬಕ್ಕರ್, ಎಲ್ಐಸಿ ಪ್ರತಿನಿಧಿ ಕೆ.ಆರ್. ಸುಬ್ರಮಣಿ, ವಿದ್ಯಾಸಂಸ್ಥೆ ನಿರ್ದೇಶಕ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ಪ್ರಾಂಶುಪಾಲೆ ಪಿ.ಎಂ. ದೇವಕಿ, ಎನ್ಎಸ್ಎಸ್ ಯೋಜನಾಧಿಕಾರಿ ಯು.ಸಿ. ಮಾಲತಿ ಉಪಸಿತರಿದ್ದರು. ಶಿಬಿರಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ಹಾಕತ್ತೂರು ಪ್ರೌಢಶಾಲೆ ವಿದ್ಯಾರ್ಥಿ ವಿ.ಎನ್. ಅರ್ಚನ ಹಾಗೂ ಪೋಷಕರನ್ನು ಸನ್ಮಾನಿಸಲಾಯಿತು.