ಮಡಿಕೇರಿ, ಅ. 8: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ವಿಶ್ವವಿದ್ಯಾನಿಲಯದ ಅಂತರ ಕಾಲೇಜುಗಳ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆ ನಡೆಯಿತು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಬಿ.ಎಸ್ಸಿ., ಪದವಿ ವಿದ್ಯಾರ್ಥಿಗಳಾದ ಟಿ.ವಿ. ಪೃಥ್ವೀಶ್, ಜಿ. ಶಿಮ್ಲ, ಶರೋಲ್ ಅಮ್ಮಣ್ಣ ಹಾಗೂ ಎಂ.ಎನ್. ಬೆನ್ ಬೋಪಯ್ಯ ಅವರು ಬೀದರ್ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಡಾ. ಪಾರ್ವತಿ ಅಪ್ಪಯ್ಯ, ವಿದ್ಯಾರ್ಥಿಗಳು ಮೂಲ ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ತಮ್ಮಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸ್ಪರ್ಧಾ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಟಿ.ಜಿ. ಪ್ರೇಮ ಕುಮಾರ್, ವಿದ್ಯಾರ್ಥಿಗಳು ಮೂಲ ವಿಜ್ಞಾನ ಕಲಿಯಲು, ಪ್ರೇರೆಪಣೆ ನೀಡಲು ಹಾಗೂ ವಿಜ್ಞಾನವು ಜನ ಸಾಮಾನ್ಯರಿಗೆ ಅರ್ಥವಾಗುವಂತೆ ಮಾತೃ ಭಾಷೆಯಲ್ಲಿ ಸರಳವಾಗಿ ತಿಳಿಸುವ ಉದ್ದೇಶದಿಂದ ಇಂತಹ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.

ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥ ಎಂ.ಎನ್. ರವಿಶಂಕರ್, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಜೆ.ಜಿ. ಮಂಜುನಾಥ್, ವಿಜ್ಞಾನ ಶಿಕ್ಷಕ ಸಿ.ಎಸ್. ಸುರೇಶ್ ಇತರರು ಇದ್ದರು.