ವೀರಾಜಪೇಟೆ, ಅ. 12: ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಇಂತಹ ವೇದಿಕೆಗಳು ಸಹಕಾರಿಯಾಗುತ್ತದೆ ಎಂದು ಕೊಡಗು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ಶಶಿ ಸುಬ್ರಮಣಿ ಹೇಳಿದರು.
ಇಲ್ಲಿನ ಜೆ.ಪಿ.ಎನ್ ಪ್ರೌಢಶಾಲೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಶಿ ಸುಬ್ರಮಣಿ, ಪ್ರಾಥಮಿಕ ಹಂತದಿಂದಲೇ ಮಕ್ಕಳ ಪ್ರತಿಭೆಗಳನ್ನು ಗುರುತಿಸಿದರೆ ಅವರು ವೇದಿಕೆಯಲ್ಲಿ ನಿರ್ಭಯದಿಂದ ಉತ್ತಮ ಪ್ರದರ್ಶನ ನೀಡಲು ಸಹಾಯವಾಗುತ್ತದೆ ಎಂದರು.
ವೀರಾಜಪೇಟೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಶಿಕ್ಷಕರು ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸಲು ಸಹಕರಿಸಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಜಿಲ್ಲಾ ಸಮನ್ವಯ ಅಧಿಕಾರಿ ಸಿ.ಬಿ. ಭಾಗ್ಯಲಕ್ಷಿ, ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಂ. ಗಣೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ. ಜೀವನ್, ತಾಲೂಕು ಪಂಚಾಯಿತಿ ಸದಸ್ಯೆ ಸರೋಜಾ, ಜೆಪಿಎನ್ ಶಾಲಾ ಮುಖ್ಯೋಪಾಧ್ಯಾಯ ಲಾಲ್ಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಪಿ.ಡಿ. ರತಿ ಮತ್ತಿತರರು ಉಪಸ್ಥಿತರಿದ್ದರು.
ಬಿಇಒ ಲೋಕೇಶ್ ಸ್ವಾಗತಿಸಿ, ಶಿಕ್ಷಕಿ ಗೀತಾಂಜಲಿ ಕಾರ್ಯಕ್ರಮ ನಿರೂಪಿಸಿದರೆ, ತಾಲೂಕು ಕ್ಷೇತ್ರ ಸಮನ್ವಯ ಅಧಿಕಾರಿ ಉತ್ತಪ್ಪ ವಂದಿಸಿದರು.