ಮಡಿಕೇರಿ, ಅ. 14 : 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರಲು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾದ ರಾಹುಲ್ ಗಾಂಧಿ ಅವರ ನಾಯಕತ್ವವನ್ನು ಬಲಪಡಿಸುವ ಕಾರ್ಯಕ್ಕೆ ಕಾರ್ಯಕರ್ತರು ಈಗಿನಿಂದಲೇ ಕಾರ್ಯೋನ್ಮುಖ ರಾಗಬೇಕೆಂದು ಅಖಿಲ ಭಾರತೀಯ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷ ಚೇತನ್‍ಚಮನ್ ಕರೆ ನೀಡಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ರಿಗೇಡ್ ಕಾಂಗ್ರೆಸ್‍ನ ಕೊಡಗು ಜಿಲ್ಲಾ ಘಟಕದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರದ ಜನಪರ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕಾರ್ಯವನ್ನು ಚುರುಕುಗೊಳಿಸಬೇಕೆಂದರು.
ರಾಹುಲ್ ಗಾಂಧಿಯವರ ನಾಯಕತ್ವ ಈ ದೇಶಕ್ಕೆ ಅಗತ್ಯವಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ. ಇದೇ ಕಾರಣಕ್ಕಾಗಿ ರಾಜ್ಯದ ಅನೇಕ ಭಾಗಗಳಲ್ಲಿ ರಾಜೀವ್ ಗಾಂಧಿ ಬ್ರಿಗೇಡ್‍ನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಮಾತನಾಡಿ ಎಲ್ಲಾ ವರ್ಗದ, ಧರ್ಮದ ಜನಾಂಗವನ್ನು ಒಗ್ಗೂಡಿಸಿಕೊಂಡು ಹೋಗುವ ಪಕ್ಷ ಕಾಂಗ್ರೆಸ್ ಪಕ್ಷವಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗದವರಿಗೂ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಯಶಸ್ವಿಯಾಗಿದೆ ಎಂದರು.
ರಾಹುಲ್‍ಗಾಂಧಿ ಬ್ರಿಗೇಡ್ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ಎ.ಸಿ. ಚುಮ್ಮಿ ದೇವಯ್ಯ ಮಾತನಾಡಿ, ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದೆಡೆಗೆ ಆಕರ್ಷಿತರಾಗುತ್ತಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಕಾರ್ಯಗಳೇ ಕಾರಣವಾಗಿ ಎಂದು ಅಭಿಪ್ರಾಯಪಟ್ಟರು.
ಬ್ರಿಗೇಡ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವರಾಜ್ ಗೌಡ ಮಾತನಾಡಿ, ಬಿಜೆಪಿ ಮತ್ತು ಸಂಘ ಪರಿವಾರದ ಪ್ರಚೋದನೆಯಿಂದ ಕೋಮು ಸಂಘರ್ಷಗಳು ನಡೆಯುತ್ತಿದೆ ಎಂದು ಆರೋಪಿಸಿದರು
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕೊಡಗು ಉಸ್ತುವಾರಿ ವಿನಯ್ ಕುಮಾರ್, ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್, ಕೊಡಗು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಎ.ಯಾಕುಬ್, ರಾಹುಲ್ ಗಾಂಧಿ ಬ್ರಿಗೇಡ್‍ನ ಪ್ರಧಾನ ಕಾರ್ಯದರ್ಶಿಗಳಾದ ಪಾಟೀಲ್, ದಿವ್ಯಪೂಜಾರಿ, ಹಾಗೂ ಕಾಂಗ್ರೆಸ್‍ನ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಕಾರ್ಯಕರ್ತರು, ನಗರಸಭಾ ಸದಸ್ಯರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾನ್ಸನ್ ಪಿಂಟೋ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.