ಮಡಿಕೇರಿ, ಅ. 14: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿ, ಮಡಿಕೇರಿ, ವತಿಯಿಂದ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಇಕೋ ಕ್ಲಬ್ ಸಹಯೋಗದಲ್ಲಿ ಮಡಿಕೇರಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇಕೋ ಕ್ಲಬ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಜಿಲ್ಲಾಮಟ್ಟದ ಪರಿಸರ ಸ್ನೇಹಿ‘ಹಸಿರು ದೀಪಾವಳಿ’ ಆಚರಣೆ ಕುರಿತ ಜಾಗೃತಿ ಆಂದೋಲನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯೂ, ದೀಪಾವಳಿ ಹಬ್ಬ ಮತ್ತಿತರ ಸಂದರ್ಭದಲ್ಲಿ ಪರಿಸರ ಮಾಲಿನ್ಯವನ್ನುಂಟು ಮಾಡುವ ಪಟಾಕಿಯನ್ನು ತ್ಯಜಿಸಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಪ್ರಯತ್ನಿಸಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್, ಪಟಾಕಿ ಸಿಡಿತದಿಂದ ಉಂಟಾಗುವ ಹಾನಿ ಮತ್ತು ಮಾಲಿನ್ಯ ತಡೆಗಟ್ಟಲು ಹಾಗೂ ಇದರ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸುವ ಮೂಲಕ ಪಟಾಕಿಮುಕ್ತ ದೀಪಾವಳಿ ಆಚರಣೆಗೆ ಎಲ್ಲರೂ ಕಂಕಣಬದ್ಧರಾಗಬೇಕು ಎಂದರು.

ತಾ. 16 ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಬೆಳಿಗ್ಗೆ 9.45 ಕ್ಕೆ ಪ್ರಾರ್ಥನಾ ಸಮಯದಲ್ಲಿ ಏಕಕಾಲದಲ್ಲಿ ಸಾಮೂಹಿಕವಾಗಿ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಕುರಿತು ಶಿಕ್ಷಕರು/ಉಪನ್ಯಾಸಕರು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಯೋಜಕ, ಪರಿಸರ ಮಿತ್ರ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಪಟಾಕಿ ಸಿಡಿಸುವದರಿಂದ ದುಂದುವೆಚ್ಚದ ಜತೆಗೆ ಪರಿಸರ ಮತ್ತು ಆರೋಗ್ಯಕ್ಕೆ ಹಾನಿ. ಇದರಿಂದ ಸಂಭವಿಸುವ ಅನಾಹುತಗಳನ್ನು ತಡೆಯಲು ಪಟಾಕಿಯನ್ನು ತ್ಯಜಿಸುವದೇ ಸರಿಯಾದ ಕ್ರಮ ಎಂದರು.

ವಿದ್ಯಾರ್ಥಿಗಳಿಗೆ ಪಟಾಕಿ ತ್ಯಜಿಸುವ ಕುರಿತ ಪ್ರತಿಜ್ಞಾ ವಿಧಿ ಬೋಧಿಸಿದ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಫಿಲಿಪ್‍ವಾಸ್, ವಿದ್ಯಾರ್ಥಿಗಳು ಪಟಾಕಿ ತ್ಯಜಿಸಿ ಮಾಲಿನ್ಯವನ್ನು ತಡೆಗಟ್ಟುವ ದಿಸೆಯಲ್ಲಿ ಎಲ್ಲರೂ ಕಂಕಣಬದ್ಧರಾಗಬೇಕಿದೆ ಎಂದರು.

ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಟಿ. ಸ್ವಾಮಿ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಕುರಿತಂತೆ ಕರಪತ್ರ ಬಿಡುಗಡೆಗೊಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಬಿ.ಎಂ. ಬೆಳ್ಳಿಯಪ್ಪ, ವಿದ್ಯಾರ್ಥಿಗಳು ಜನರಲ್ಲಿ ಪರಿಸರ ಜಾಗೃತಿ ಮೂಡಿಸಬೇಕು ಎಂದರು.

ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್‍ನ ನಿರ್ದೇಶಕ ಕೆ.ಡಿ. ದಯಾನಂದ, ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಇ. ಮೊಹಿದ್ದೀನ್, ಜಿಲ್ಲಾ ಪಿಯೂ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಸಿ.ಎನ್. ವಿಶ್ವನಾಥ್, ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಸಿ.ಎಂ. ಮಹಾಲಿಂಗಯ್ಯ, ಉಪನ್ಯಾಸಕರಾದ ಎನ್.ಎಸ್. ಚಿದಾನಂದ, ಎಸ್. ನಂದೀಶ್, ಎಚ್.ಜೆ. ನಾಗರಾಜ್ ಇದ್ದರು. ಶಿಕ್ಷಕ ಪಿ.ಎಸ್. ರವಿಕೃಷ್ಣ ಸ್ವಾಗತಿಸಿದರೆ, ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು. ಉಪನ್ಯಾಸಕ ನಂದೀಶ್ ಕಾರ್ಯನಿರ್ವಹಿಸಿ, ಎಂ.ಇ. ಮೊಹಿದ್ದೀನ್ ವಂದಿಸಿದರು.