ಕುಶಾಲನಗರ, ಅ. 15: ವಿದ್ಯಾರ್ಥಿ ಜೀವನದಿಂದಲೇ ಅಳವಡಿಸಿಕೊಂಡ ಮೌಲ್ಯಯುತ ಗುಣಗಳು ಭವಿಷ್ಯಕ್ಕೆ ದಾರಿದೀಪವಾಗಲಿದೆ ಎಂದು ಕುಶಾಲನಗರ ವೃತ್ತ ನಿರೀಕ್ಷಕ ಕ್ಯಾತೆಗೌಡ ಹೇಳಿದರು. ಸ್ಥಳೀಯ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ‘ಸ್ಟೂಡೆಂಟ್ ಪೊಲೀಸ್ ಕೆಡೆಟ್’ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಸಮಾಜ ಮುಖಿಯಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಈ ಘಟಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳಬೇಕಿದೆ ಎಂದು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಮುದಾಯ ಪೊಲೀಸ್ ಅಧಿಕಾರಿ ಸದಾಶಿವಯ್ಯ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಗುಣಗಳು ಹಾಗೂ ಸೃಜನಶೀಲತೆ ಉಂಟುಮಾಡುವಲ್ಲಿ ಘಟಕದ ಪ್ರಮುಖ ಪಾತ್ರವಹಿಸಲಿದೆ. ಘಟಕದ ವಿದ್ಯಾರ್ಥಿಗಳು ವಿವಿಧ ರೀತಿಯ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಉತ್ತಮ ಕಾರ್ಯನಿರ್ವಹಣೆಗಾಗಿ ಶಾಲೆಯ ಈ ಘಟಕ ರಾಜ್ಯಕ್ಕೆ ಎರಡನೇ ಸ್ಥಾನಗಳಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭ ಕೆಡೆಟ್‍ಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಎನ್. ವಸಂತಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕುಶಾಲನಗರ ಪೊಲೀಸ್ ಠಾಣಾಧಿಕಾರಿ ಜಗದೀಶ್, ಸಹಾಯಕ ಠಾಣಾಧಿಕಾರಿ ಹೆಚ್.ಎಸ್.ರವಿ, ಕಾಲೇಜು ಉಪಪ್ರಾಂಶುಪಾಲ ಆಯಚ್ಚು ಇದ್ದರು. ಎಪಿಸಿಒ ತುಳಸಿ ಕಾರ್ಯಕ್ರಮ ನಿರೂಪಿಸಿದರು, ಐಶ್ವರ್ಯ ಮತ್ತು ತಂಡ ಪ್ರಾರ್ಥಿಸಿತು.