ಸೋಮವಾರಪೇಟೆ, ಅ. 15: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಜನಪರ ಯೋಜನೆಗಳ ಬಗ್ಗೆ ಪ್ರತಿ ಮನೆಗೂ ಮಾಹಿತಿ ನೀಡುವ ಮೂಲಕ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮ ವಹಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಹೇಳಿದರು.

ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ವಲಯ ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಪ್ರತಿಮನೆಗೂ ತಲುಪಿಸಬೇಕು ಎಂದರು.

ರಾಜ್ಯಾದ್ಯಂತ ನಡೆಯುತ್ತಿರುವ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ವನ್ನು ಸೋಮವಾರಪೇಟೆ ಬ್ಲಾಕ್ ವ್ಯಾಪ್ತಿಯಲ್ಲಿ ಯಶಸ್ವಿಗೊಳಿಸಬೇಕು. ಪ್ರತಿಯೋರ್ವ ಕಾರ್ಯಕರ್ತರೂ ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಬೇಕು ಎಂದು ಲೋಕೇಶ್ ತಿಳಿಸಿದರು.

ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಮಾತನಾಡಿ, ರಾಜ್ಯ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಯೋಜನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳು ಜನತೆಯ ಮನಮುಟ್ಟಿದೆ. ಇವುಗಳ ಬಗ್ಗೆ ಇನ್ನಷ್ಟು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು. ವಿಧಾನ ಸಭಾ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸುವ ಮೂಲಕ ಕೊಡಗಿನ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಆಯಾ ವಲಯ ಮತ್ತು ಬೂತ್ ವ್ಯಾಪ್ತಿಯಲ್ಲಿ ಅಭಿಯಾನವನ್ನು ಯಶಸ್ವಿಗೊಳಿಸುವ ಹೊಣೆಯಲ್ಲಿ ವಲಯ ಸಮಿತಿಯ ಪದಾಧಿಕಾರಿಗಳು ಹೊತ್ತುಕೊಳ್ಳಬೇಕು.

ಕರಪತ್ರ ಮತ್ತು ಸರ್ಕಾರದ ಸಾಧನೆಗಳನ್ನು ವಿವರಿಸುವ ಮಾಹಿತಿ ಪುಸ್ತಕವನ್ನು ಪ್ರತಿ ಮನೆಗೂ ತಲುಪಿಸಬೇಕು ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಎ. ಯಾಕೂಬ್ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಟ್ಟರು.

ಇದುವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸದೇ ಇರುವವರ ಹೆಸರನ್ನು ತಕ್ಷಣ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ನೂತನ ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಚಂಗಪ್ಪ ಅವರು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ನಂದಕುಮಾರ್, ಬಸಪ್ಪ, ತಾ.ಪಂ. ಸದಸ್ಯ ಬಿ.ಬಿ. ಸತೀಶ್, ಅನಂತ್ ಕುಮಾರ್, ಐಎನ್‍ಟಿಯುಸಿ ಜಿಲ್ಲಾಧ್ಯಕ್ಷ ಹಮೀದ್, ಚೌಡ್ಲು ಗ್ರಾ.ಪಂ. ಅಧ್ಯಕ್ಷೆ ವನಜ, ಅಲ್ಪಸಂಖ್ಯಾತ ಘಟಕದ ಅಬ್ಬಾಸ್, ಹನೀಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು.