ಮಡಿಕೇರಿ, ಅ.17: ಜಿಲ್ಲಾಡಳಿತ ವತಿಯಿಂದ ವಿಶಿಷ್ಟ ಮತ್ತು ಅರ್ಥ ಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧರಿಸಲಾಗಿದ್ದು, ಎಲ್ಲಾ ಇಲಾಖಾ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳು ಕೈಜೋಡಿಸಿ ಕನ್ನಡ ರಾಜ್ಯೋತ್ಸವ ಯಶಸ್ವಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಾಡಿನ ಹಬ್ಬವಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಜೊತೆಗೆ ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸುವಂತಾಗಬೇಕು. ಬೆಳಗಿನ ಹಾಗೂ ಸಂಜೆಯ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಪಾಲ್ಗೊಳ್ಳಬೇಕು. ಅದೇ ರೀತಿ ಸ್ತಬ್ಧಚಿತ್ರಗಳನ್ನು ಸಹ ವಿಷಯಾಧಾರಿತ ವಾಗಿ ಆಕರ್ಷಣೀಯವಾಗಿ ನಿರ್ಮಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1 ರಂದು ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಂಗಡಿ ವಾಣಿಜ್ಯ ಸಂಕೀರ್ಣಗಳಲ್ಲಿ ಅಲಂಕಾರ ಮಾಡಿ ಕನ್ನಡ ಧ್ವಜ ಹಾರಿಸಿ ನಾಡಹಬ್ಬಕ್ಕೆ ಮೆರುಗು ತರುವಂತಾಗಬೇಕು. ಅದೇ ರೀತಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿವಿಧ ಉಪ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಯಿತು. ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ತಿಂಡಿ, ಲಘು ಉಪಾಹಾರ ಜವಾಬ್ದಾರಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೇಲುಸ್ತುವಾರಿ ಆಹಾರ ಸಮಿತಿಗೆ ವಹಿಸಲಾಯಿತು. ಎಲ್ಲರ ಸಹಕಾರ ದೊಂದಿಗೆ ಉತ್ತಮ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಹೆಚ್ಚುವರಿ
(ಮೊದಲ ಪುಟದಿಂದ) ಜಿಲ್ಲಾದಿಕಾರಿ ಎಂ.ಸತೀಶ್ ಕುಮಾರ್ ಅವರು ಸೂಚಿಸಿದರು.
ಉಪ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಐತಿಹಾಸಿಕ ಸಂದೇಶವನ್ನು ಒಳಗೊಂಡ ಸ್ತಬ್ಧಚಿತ್ರಗಳನ್ನು ನಿರ್ಮಾಣ ಮಾಡುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು.
ಹಾಗೆಯೇ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲು ನಿರ್ದೇಶನ ನೀಡಿದರು. ರಾಜ್ಯೋತ್ಸವ ಸಂದರ್ಭದಲ್ಲಿ ಕುಡಿಯುವ ನೀರು ಸೌಲಭ್ಯ ಕಲ್ಪಿಸುವದರ ಜತೆಗೆ, ಸ್ವಚ್ಚತೆ ಸಂಬಂಧಿಸಿದಂತೆ ಅಗತ್ಯ ಕ್ರಮವಹಿಸುವಂತೆ ಪೌರಾಯುಕ್ತರಿಗೆ ತಿಳಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ಸಾಗರ್, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಡಿ.ಎಂ.ದಾನೋಜಿ, ಆಹಾರ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್, ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಕಾರ್ಮಿಕ ಇಲಾಖೆ ಅಧಿಕಾರಿ ರಾಮಚಂದ್ರ, ಜಿ.ಪಂ. ಇಂಜಿನಿಯರ್ ಮಂಜುನಾಥ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಗೋಪಾಲಕೃಷ್ಣ, ಕೆ.ಎಸ್.ಆರ್.ಟಿ.ಸಿ. ಮಡಿಕೇರಿ ಘಟಕದ ವ್ಯವಸ್ಥಾಪಕಿ ಗೀತಾ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಇಬ್ರಾಹಿಂ, ಸಹಕಾರ ಸಂಘಗಳ ಇಲಾಖೆ ರವಿಕುಮಾರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ದೇವಕಿ ಇತರರು ಇದ್ದರು.