ಮಡಿಕೇರಿ, ಅ. 22: ಮನೆ ಮನೆ ಕಡೆಗೆ ಕಾಂಗ್ರೆಸ್ ನಡಿಗೆ ಅಭಿಯಾನದ ಸಂದರ್ಭ ಸಾರ್ವಜನಿಕರು ಬಗೆಹರಿಯದ ಅನೇಕ ಸಮಸ್ಯೆಗಳನ್ನು ಹೇಳಿಕೊಂಡಿದ್ದು, ಈ ಬಗ್ಗೆ ಕಂದಾಯ ಸಚಿವರು ಸೇರಿದಂತೆ ಸಂಬಂಧಿಸಿದ ಎಲ್ಲಾ ಸಚಿವರುಗಳ ಬಳಿಗೆ ನಿಯೋಗ ತೆರಳಲು ಜಿಲ್ಲಾ ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾóಕ್ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾವು ಹಾಗೂ ಪಕ್ಷದ ಎಲ್ಲಾ ಪದಾಧಿಕಾರಿಗಳು ಜನ ಜಾಗೃತಿಗಾಗಿ ಮನೆ ಮನೆಗೆ ತೆರಳಿದ ಸಂದರ್ಭ ಅನೇಕ ಸಮಸ್ಯೆಗಳನ್ನು ಸಾರ್ವಜನಿಕರು ಹೇಳಿಕೊಂಡಿದ್ದಾರೆ. ಸರಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಅರ್ಜಿದಾರರನ್ನು ಸತಾಯಿಸುತ್ತಿದ್ದಾರೆ ಎನ್ನುವ ದೂರು ಕೇಳಿ ಬಂದಿದೆ. ಕಂದಾಯ ಇಲಾಖೆ, ಸಾರಿಗೆ ಕಚೇರಿ, ಸರಕಾರಿ ಆಸ್ಪತ್ರೆ, ನಗರಸಭೆ, ಚೆಸ್ಕಾಂ ಸೇರಿದಂತೆ ಹಲವು ಇಲಾಖೆಗಳಲ್ಲಿ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ, ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಜಿಲ್ಲಾ ಖಜಾಂಚಿ ಎಂ.ವಿ. ಮೇದಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನಾ ಸೇರಿದಂತೆ ನಗರದ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಬಳಿಗೆ ನಿಯೋಗ ತೆರಳಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿಕೊಳ್ಳಲು ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿಸಿದ್ದಾರೆ.