ಮಡಿಕೇರಿ, ಅ. 23: ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ- ಬಾಲಕಿಯರ ಹಾಕಿ ಪಂದ್ಯಾವಳಿಗೆ ಸೋಮವಾರ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ಚಾಲನೆ ದೊರೆಯಿತು.

ವಿಭಾಗ ಮಟ್ಟದ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಿದ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮತ್ತು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರು ಮೈಸೂರು ವಿಭಾಗ ಮಟ್ಟದ ಹಾಕಿ ಪಂದ್ಯಾವಳಿಗೆ ಗೋಲ್ ಹೊಡೆಯುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಲೋಕೇಶ್ವರಿ ಗೋಪಾಲ್ ಅವರು ಮೈಸೂರು ವಿಭಾಗ ಮಟ್ಟದ ಹಾಕಿ ಪಂದ್ಯಾವಳಿಯು ಮಡಿಕೇರಿಯಲ್ಲಿ ನಡೆಯುತ್ತಿರುವದು ಸಂತಸದ ವಿಚಾರ. ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳು ಹಾಕಿ ಪಂದ್ಯಾವಳಿಯಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳುವಂತೆ ಅವರು ಸಲಹೆ ನೀಡಿದರು.

ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಂಡು ರಾಷ್ಟ್ರಕ್ಕೆ ಹೆಸರು ತರುವಂತಾಗಬೇಕು. ಆ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಅವರು ಸಲಹೆ ಮಾಡಿದರು.

ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಹಕಾರಿ. ಕ್ರೀಡೆ ಎಂದ ಮೇಲೆ ಸೋಲು ಗೆಲುವು ಇದ್ದೇ ಇರುತ್ತದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ದಶರಥ ಎಂ.ದಾನೋಜಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಎನ್.ಗಾಯತ್ರಿ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಮೃತ್ಯುಂಜಯ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶಿವರಾಮ್, ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಗುರುರಾಜ್, ಡಿ.ಎಂ.ರೇವತಿ ಇತರರು ಇದ್ದರು.