ಕೂಡಿಗೆ, ಅ. 25: ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬನಶಂಕರಿ ಸಮುದಾಯ ಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ರಾಜಶೇಖರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿ ಯಾರೆ ಆದರೂ ಪಕ್ಷದ ಗೆಲುವಿಗೆ ಕಾರ್ಯಕರ್ತರು ಒಗ್ಗೂಡಿ ಕಾರ್ಯನಿರ್ವಹಿಸಬೇಕೆಂದರು.

ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಬೂತ್ ಮಟ್ಟದ ಕಾರ್ಯಕರ್ತರು ಕೇಂದ್ರ ಸರ್ಕಾರದ ಯೋaಜನೆಗಳನ್ನು ಜನತೆಗೆ ಮನವರಿಕೆ ಮಾಡುವಂತಾಗಬೇಕೆಂದರು. ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ದಿನದಿಂದ ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹರೀಶ್, ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷ ಹೆಚ್.ಆರ್. ಶ್ರೀನಿವಾಸ್, ತಾಲೂಕು ಪಂಚಾಯಿತಿ ಸದಸ್ಯ ಜಯಣ್ಣ, ಯುವ ಮೋರ್ಚಾದ ಅಧ್ಯಕ್ಷ ಆದರ್ಶ, ಹುಲುಸೆ ಗ್ರಾಮದ ಬೂತ್ ಸಮಿತಿಯ ಮಲ್ಲಿಕ ಹಿರಿಯ ನಾಗರಿಕ ಸುಂದರ್ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.