*ಸಿದ್ದಾಪುರ, ಅ. 26: ಪಾಲಿಬೆಟ್ಟ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಸಿದ್ದಾಪುರ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮ ನಡೆಯಿತು. ಶಾಲಾ ಸಭಾಗಂಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಮುಂದೆ ಬರಬೇಕೆಂದರು.

ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಮಾತನಾಡಿ, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ರೂಪಿಸಲು ಸಹಕಾರಿಯಾಗಲಿದೆ ಎಂದರು. ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ಉಪಾಧ್ಯಕ್ಷ ಜೋಸೆಫ್ ಶ್ಯಾಮ್ ಮಾತನಾಡಿ, ವಿದ್ಯಾರ್ಥಿಗಳು ಶಿಬಿರಗಳಲ್ಲಿ ಶಿಸ್ತು ಸಮಯ ಪಾಲನೆಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರತಿಮಾ ಚಂದ್ರಶೇಖರ್, ಶೈಲಾ ಹಾಗೂ ಶಿಕ್ಷಕರುಗಳು ಮತ್ತು ಶಿಬಿರಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.