ಸಿದ್ದಾಪುರ, ಅ. 30: ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಹೆಚ್ಚಿನ ಅನುದಾನವನ್ನು ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ ತಿಳಿಸಿದರು.
ಚೆನ್ನಯ್ಯನಕೋಟೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದಾರಾಮಯ್ಯ ನೇತೃತ್ವದ ಸರ್ಕಾರವು ಕೊಡಗು ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶದ ರಸ್ತೆಗಳು ಸೇರಿದಂತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಚೆನ್ನಯ್ಯನಕೋಟೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. 44 ಲಕ್ಷ ವೆಚ್ಚದಲ್ಲಿ ಗ್ರಾಮೀಣ ರಸ್ತೆಗಳ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಶೀಘ್ರದಲ್ಲೆ ಕಾಮಗಾರಿ ಪ್ರಾರಂಭಿಸಲಾಗುವದೆಂದು ಭರವಸೆ ನೀಡಿದರು.
ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಪಿ.ಸಿ. ಹಸೈನಾರ್‍ಹಾಜಿ ಸನ್ಮಾನ ಸ್ವೀಕರಿಸಿ ಮಾತನಾಡಿ, ರಾಜ್ಯ ಸರ್ಕಾರ ಜನಪರ ಕಾಳಜಿ ಇರುವಂತ ಸರ್ಕಾರವಾಗಿದ್ದು, ಗ್ರಾಮಾಂತರ ಪ್ರದೇಶದ ಅಭಿವೃದ್ಧಿಗಾಗಿ ಸಾಕಷ್ಟು ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದೆÉ ಎಂದರು.
ವೀರಾಜಪೇಟೆ ಬ್ಲಾಕ್ ಕಾರ್ಯದರ್ಶಿ ಯೋಗೇಶ್ ಮಾತನಾಡಿ, ಈ ಭಾಗದಲ್ಲಿ ಈ ಹಿಂದೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಏಕಾಏಕಿ ಸ್ಥಗಿತಗೊಳಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಈ ಭಾಗದ ಕಾರ್ಮಿಕರಿಗೆ, ಶಾಲಾ ಮಕ್ಕಳಿಗೆ ಸಮಸ್ಯೆಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ ಅನುದಾನದಲ್ಲಿ ಚೆನ್ನಯ್ಯನಕೋಟೆಯ ಅಯ್ಯಪ್ಪ ದೇವಾಲಯಕ್ಕೆ ಸೋಲಾರ್ ದೀಪವನ್ನು ವಿತರಿಸಲಾಯಿತು. ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಕ್ಕೆ ಉಪಾಧ್ಯಕ್ಷ ಪಿ.ಸಿ. ಹಸೈನಾರ್‍ಹಾಜಿ ಹಾಗೂ ಜಿಲ್ಲಾ ಉಸ್ತುವಾರಿ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ ಅವರನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯೆ ಲೀಲಾವತಿ, ಜಿ.ಪಂ. ಮಾಜಿ ಸದಸ್ಯ ಹೆಚ್.ಸಿ. ಸಣ್ಣಯ್ಯ, ತಾ.ಪಂ. ಮಾಜಿ ಸದಸ್ಯ ಸಿ.ಎ. ಹಂಸ, ವಲಯ ಕಾಂಗ್ರೆಸ್ ಅಧ್ಯಕ್ಷ ವಾಟೇರಿರ ಸುರೇಶ್‍ಸೋಮಯ್ಯ, ಪಕ್ಷದ ಮುಖಂಡರುಗಳಾದ ರಾಮದಾಸ್, ಜಾಫರ್, ರವಿ, ನೌಫಲ್, ಹಮೀದ್‍ಹಾಜಿ, ಮಸೀದಿ ಸಮಿತಿಯ ಅಧ್ಯಕ್ಷ ಅಶ್ರಫ್ ಹಾಗೂ ಇತರರು ಹಾಜರಿದ್ದರು.