ಮಡಿಕೇರಿ, ಅ. 31: ಪರಿಶಿಷ್ಟ ಜಾತಿ, ಪಂಗಡ ಸೇರಿದಂತೆ ಬಡವರ ಕಲ್ಯಾಣಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ವಿವಿಧ ಸವಲತ್ತುಗಳನ್ನು ಕಲ್ಪಿಸುತ್ತಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಕರೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳನ್ನು ಉದ್ದೇಶಿಸಿ ಸಚಿವರು ಮಾತನಾಡಿದರು.

ಸಮಗ್ರ ಗಿರಿಜನ ಕಲ್ಯಾಣ ಕಾರ್ಯಕ್ರಮದಲ್ಲಿ ಹತ್ತು ಮಂದಿ ಫಲಾನುಭವಿಗಳಿಗೆ ಸಚಿವರು ಗೂಡ್ಸ್ ಆಟೋಗಳನ್ನು ವಿತರಿಸಿದರು. ಅಲ್ಲದೆ ತಾಲೂಕಿನ 40 ಮಂದಿ ಫಲಾನುಭವಿಗಳಿಗೆ ಆಶ್ರಯ ಯೋಜನೆಯಡಿ ಮತ್ತು ಇತರ ಅರ್ಹತೆಯೊಂದಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕರು ಗಳಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಅರಣ್ಯ ನಿಗಮ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ, ತಹಶೀಲ್ದಾರ್ ಕುಸುಮ ಸೇರಿದಂತೆ ಇತರ ಪ್ರಮುಖರು ಭಾಗವಹಿಸಿದ್ದರು.

ಮಡಿಕೇರಿ ನಗರ ಸೇರಿದಂತೆ ಗ್ರಾಮೀಣ ಭಾಗದ ಫಲಾನುಭವಿಗಳಿಗೆ ಜನಪ್ರತಿನಿಧಿಗಳು ಹಕ್ಕು ಪತ್ರ ನೀಡಿ, ನಿವೇಶನಗಳನ್ನು ಪರಭಾರೆಗೊಳಿಸದೆ ಕಾಪಾಡಿಕೊಳ್ಳುವಂತೆ ತಿಳಿಹೇಳಿದರು.