ಮಡಿಕೇರಿ, ನ. 2: ನಗರದ ಸಂತ ಜೋಸೆಫರ ಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿನಾಚರಣೆ ಮತ್ತು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಆಚರಿಸಲಾಯಿತು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರೇಣುಕಾ ಚಿದಂಬರಂ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವಿಜು ಸುಬ್ರಮಣಿ, ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಪುಪ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ರಾಷ್ಟ್ರೀಯ ಸಂಕಲ್ಪ ದಿನದ ಮಹತ್ವದ ಬಗ್ಗೆ ಮಾತನಾಡಿದ ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಪ್ರಧಾನಮಂತ್ರಿಯಾಗಿ ಹಲವು ಆದರ್ಶ, ಮಾದರಿ ಆಡಳಿತ ನೀಡುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದರು ಎಂದು ಅವರು ಸ್ಮರಿಸಿದರು.

ಹಾಗೆಯೇ ದೇಶದ ಪ್ರಥಮ ಗೃಹ ಸಚಿವ ಸರ್ದಾರ್ ವಲ್ಲಭಬಾಯ್ ಪಟೇಲ್‍ರವರ ದೂರದೃಷ್ಟಿ ಮತ್ತು ಕಾರ್ಯದಕ್ಷತೆಯಿಂದ ರಾಷ್ಟ್ರೀಯ ಏಕೀಕರಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದರು.

ರಾಷ್ಟ್ರದ ಆಂತರಿಕ ಭದ್ರತೆಗೆ ಶ್ರಮಿಸಿದರು ಎಂದು ಅವರು ಹೇಳಿದರು. ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಜಿ.ಪಂ. ಯೋಜನಾ ನಿರ್ದೇಶಕ ಸಿದ್ದಲಿಂಗ ಮೂರ್ತಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ್‍ರಾಜ್, ನಾಗಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಗೋಪಾಲಕೃಷ್ಣ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ. ಜಗನ್ನಾಥ್ ಇತರರು ಇದ್ದರು.

ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞೆಯನ್ನು ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್ ಬೋಧಿಸಿದರು.