ಕುಶಾಲನಗರ, ನ. 3: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯದಲ್ಲಿ ಆಸಕ್ತಿ ಹಾಗೂ ಕುತೂಹಲ ಮೂಡಿಸುವದರೊಂದಿಗೆ ಅವರಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್ ಕರೆ ನೀಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ ಸಹಯೋಗದೊಂದಿಗೆ ‘ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ನವೀನ ಅನ್ವಯಗಳ ಬಳಕೆ’ ಎಂಬ ಕೇಂದ್ರ ವಿಷಯಕ್ಕೆ ಸಂಬಂಧಿಸಿದಂತೆ 25 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಪೂರ್ವಭಾವಿಯಾಗಿ ಕುಶಾಲನಗರ ಬಾಲಕಿಯರ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ವಿಜ್ಞಾನ ಸಮಾವೇಶದ ಮೂಲಕ ಸಂಶೋಧನಾ ಪ್ರವೃತ್ತಿ ಬೆಳೆಸಿಕೊಂಡು ಭವಿಷ್ಯದ ವಿಜ್ಞಾನಿಗಳಾಗಿ ರೂಪುಗೊಳ್ಳಲಿ ಎಂದು ಹಾರೈಸಿದರು. ವಿದ್ಯಾರ್ಥಿಗಳು ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಪರಿಸರ ಸಂರಕ್ಷಣೆಗೆ ಪೂರಕವಾಗಿ ಸೂಕ್ತ ರೀತಿಯಲ್ಲಿ ಕಸ ವಿಂಗಡಣೆ ಹಾಗೂ ಜಲ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಉತ್ತಮ ಯೋಜನೆಗಳ ಮೂಲಕ ತಮ್ಮನ್ನು ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಶಿಕ್ಷಕರು ಮಾರ್ಗದರ್ಶನ ನೀಡಬೇಕು ಎಂದು ಗಣೇಶನ್ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್. ನಾಗರಾಜಯ್ಯ ಮಾತನಾಡಿ, ಮಕ್ಕಳ ವಿಜ್ಞಾನ ಸಮಾವೇಶ ಮಕ್ಕಳಲ್ಲಿ ತಮ್ಮ ಸುತ್ತಲಿನ ಪರಿಸರದ ಸಮಸ್ಯೆಗಳನ್ನು ಗುರುತಿಸಿ ಅಧ್ಯಯನ ಕೈಗೊಂಡು ಸ್ವತಃ ತಾವೇ ವೈಜ್ಞಾನಿಕ ಯೋಜನಾ ಪ್ರಬಂಧವನ್ನು ಮಂಡಿಸಲು ನೆರವಾಗಿದೆ. ಶಿಕ್ಷಕರು ಮಕ್ಕಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ಅವರಲ್ಲಿ ಸೃಜನಶೀಲತೆ ಹಾಗೂ ಕ್ರಿಯಾಶೀಲತೆ ಬೆಳೆಸಲು ಹೆಚ್ಚಿನ ಶ್ರಮ ವಹಿಸಬೇಕು ಎಂದರು.

ಸಮಾವೇಶದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಜಿ. ಪ್ರೇಮ ಕುಮಾರ್, ಈ ಸಮಾವೇಶ ಮಕ್ಕಳನ್ನು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸೂಕ್ತ ವೇದಿಕೆ ಒದಗಿಸುವದರೊಂದಿಗೆ ಅವರನ್ನು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಲು ಹಾಗೂ ಅವರಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸಲು ಪ್ರಯತ್ನ ನಡೆಯುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಫಿಲಿಪ್‍ವಾಸ್, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ಪರಿಸರ ಅಧ್ಯಯನದ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಲು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು. ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೈಸೂರು ವಿಭಾಗದ ಸಂಚಾಲಕ ಎಂ. ರಂಗಸ್ವಾಮಿ ಸಮಾವೇಶಕ್ಕೆ ಸಂಬಂಧಿಸಿದ ಮಾಹಿತಿ ಕೈಪಿಡಿಯನ್ನು ಬಿಡುಗಡೆಗೊಳಿಸಿದರು.

ಸಂಪನ್ಮೂಲ ವ್ಯಕ್ತಿ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಜಿ. ಶ್ರೀನಾಥ್, ವಿಜ್ಞಾನ ಸಮಾವೇಶಕ್ಕೆ ವಿದ್ಯಾರ್ಥಿಗಳಿಂದ ಉತ್ತಮ ಪ್ರಬಂಧಗಳನ್ನು ತಯಾರಿಸುವ ಬಗ್ಗೆ ಮಾಹಿತಿ ಒದಗಿಸಿದರು. ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಪಿ. ಧರ್ಮಪ್ಪ, ಸಮಾವೇಶದ ಜಿಲ್ಲಾ ಸಂಯೋಜಕ ಸಿ.ಎಸ್. ಸುರೇಶ್, ಶೈಕ್ಷಣಿಕ ಸಂಯೋಜಕ ಜಿ. ಶ್ರೀಹರ್ಷ, ಉಪನ್ಯಾಸಕ ಎಸ್.ಹೆಚ್. ಈಶ ಇದ್ದರು. ಕಾರ್ಯಾಗಾರದಲ್ಲಿ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.