ಸೋಮವಾರಪೇಟೆ, ನ. 18: ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ತಾಲೂಕಿನ ಶಿರಂಗಾಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆಯ ಉಪಯೋಗ-ದುರುಪಯೋಗ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಾಗಾರ ನಡೆಯಿತು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಎದುರಿಸುವ ದುಷ್ಪರಿಣಾಮಗಳ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮಹೇಶ್ ಮಾಹಿತಿ ನೀಡಿ, ಕಾನೂನಿನಲ್ಲಿ ಮಕ್ಕಳ ರಕ್ಷಣೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಣೆ ಒದಗಿಸಿದರು.
ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳ ಸಹಾಯವಾಣಿ ಕೇಂದ್ರದ ನವೀನ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುನಾಥ್, ಎಸ್‍ಜೆಪಿಯು ಸಿಬ್ಬಂದಿ ತೇಜಸ್ವಿನಿ, ಮುಖ್ಯಪೇದೆ ಮೋಹನ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಸೋಮಯ್ಯ, ಮಕ್ಕಳ ಸಹಾಯವಾಣಿ ಕೇಂದ್ರದ ಕಾರ್ಯಕರ್ತೆ ಕುಮಾರಿ ಉಪಸ್ಥಿತರಿದ್ದರು.