ಸೋಮವಾರಪೇಟೆ, ನ. 22: ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹಣ ಪಡೆದುಕೊಂಡಿರುವ ಗುತ್ತಿಗೆದಾರರು ಇಂದಿಗೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಈ ಹಿನ್ನೆಲೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡುವದರೊಂದಿಗೆ ಪೊಲೀಸ್ ಇಲಾಖೆಗೂ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಇಲ್ಲಿನ ತಾಲೂಕು ಪಂಚಾಯಿತಿ ಸಾಮಾನ್ಯ ಸ್ಥಾಯಿ ಸಮಿತಿಯ ಸಭೆ ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ನಡೆಯಿತು. ತಾಲೂಕಿನ 40ಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 2013 ರಲ್ಲಿಯೇ ಹಣ ಪಡೆದುಕೊಂಡಿದ್ದು ಇದುವರೆಗೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಈ ಹಿನ್ನೆಲೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸ್ಸು ಸಲ್ಲಿಸುವಂತೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬ್ಯಾಡಗೊಟ್ಟ ಗ್ರಾಮದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೆಲವರು ಸಮಾಜಕ್ಕೆ ತಪ್ಪು ಸಂದೇಶದ ಹೇಳಿಕೆ ನೀಡುತ್ತಿದ್ದಾರೆ. ಕಾಮಗಾರಿ ಕಳಪೆಯಾಗಿದೆ ಎಂದು ಸಂಘಟನೆಯ ಮುಖಂಡ ಹೇಳಿದರೆ, ಕಾಮಗಾರಿ ಉತ್ತಮವಾಗಿದೆ ಎಂದು ರಾಜಕಾರಣಿ ಹೇಳುತ್ತಿದ್ದಾರೆ. ತಕ್ಷಣ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ವಾಸ್ತವಾಂಶದ ವರದಿ ನೀಡಬೇಕೆಂದು ಅಭಿಮನ್ಯು ಕುಮಾರ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬ್ಯಾಡಗೊಟ್ಟದಲ್ಲಿ ಮನೆ ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದಿರುವ ಸಂಸ್ಥೆ ರಾಜಕಾರಣಿಯ ಪುತ್ರನಿಗೆ ತುಂಡು ಗುತ್ತಿಗೆ ನೀಡಿದೆ. ಆದ್ದರಿಂದ ಈ ರಾಜಕಾರಣಿ ಕಾಮಗಾರಿ ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಅಧಿಕಾರಿಗಳು ನಿಷ್ಪಕ್ಷಪಾತವಾಗಿ ವರದಿ ನೀಡಬೇಕೆಂದು ತಿಳಿಸಿದರು.

ಕೃಷಿ ಇಲಾಖೆಯಿಂದ ರೈತರಿಗೆ ರಿಯಾಯಿತಿ ದರದಲ್ಲಿ ಒದಗಿಸುತ್ತಿರುವ ಪರಿಕರಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಗುಣಮಟ್ಟಕ್ಕೆ ಆದ್ಯತೆ ನೀಡಬೇಕೆಂದು ಸದಸ್ಯೆ ಸಬಿತಾ ಚನ್ನಕೇಶವ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳೀಯ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂಬೇಡ್ಕರ್ ವಸತಿ ಶಾಲೆಯೂ ನಡೆಯುತ್ತಿದ್ದು, ವಿದ್ಯಾರ್ಥಿಗಳ ಸ್ಥಿತಿ ಶೋಚನೀಯವಾಗಿದೆ. ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಶೌಚಾಲಯಕ್ಕೂ ಗಂಟೆಗಟ್ಟಲೆ ಸರತಿ ಸಾಲು ನಿಲ್ಲಬೇಕಿದೆ. ಸಮಸ್ಯೆ ಬಿಗಡಾಯಿಸಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ವರದಿ ಸಲ್ಲಿಸಿ ಎಂದು ಎಂದು ಅಭಿಮನ್ಯು ಕುಮಾರ್ ಸಂಬಂಧಿಸಿದ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ತಾಲೂಕಿನ ಆಸ್ಪತ್ರೆಗಳಲ್ಲಿ ರಕ್ಷಾ ಸಮಿತಿಗಳ ಸಭೆ ನಡೆಯದೇ ಇರುವದರಿಂದ ಹಲವು ತೊಂದರೆಗಳಾಗಿವೆ. ಆದ್ದರಿಂದ ಕನಿಷ್ಟ 2-3 ತಿಂಗಳಿಗೆ ಒಮ್ಮೆಯಾದರೂ ಸಭೆ ನಡೆಸಲು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಯಿತು.

ಜಿಲ್ಲೆ ಗುಡ್ಡಗಾಡು ಪ್ರದೇಶ ವಾಗಿರುವದರಿಂದ ಗರ್ಭಿಣಿಯರು ಹಾಗೂ ಬಾಣಂತಿಯರು ಅಂಗನವಾಡಿಗೆ ಬರಲು ಕಷ್ಟವಾಗುತ್ತಿದೆ. ಆದ್ದರಿಂದ ಈ ಹಿಂದಿನಂತೆಯೇ ಸೌಕರ್ಯಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದು ಗಮನ ಸೆಳೆಯುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗೆ ಸೂಚಿಸಿದರು.

ಸೋಮವಾರಪೇಟೆಯಲ್ಲಿ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ನಡೆಸುವ ಬಾಲಕರಿಗೆ ವಸತಿ ನಿಲಯಗಳಿಲ್ಲ ದಿರುವದರಿಂದ ಹಲವು ಶಿಕ್ಷಣ ಸಂಸ್ಥೆಗಳು ಮುಚ್ಚುವಂತಹ ಪರಿಸ್ಥಿತಿಗೆ ಬಂದಿದೆ. ಆದ್ದರಿಂದ ಬಾಲಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳು ತುರ್ತು ಗಮನ ಹರಿಸಿ ತಕ್ಷಣವೇ ಪ್ರಸ್ತಾವನೆ ಸಲ್ಲಿಸುವಂತೆ ಅಭಿಮನ್ಯು ಕುಮಾರ್ ನಿರ್ದೇಶಿಸಿದರು. ಸಭೆಯಲ್ಲಿ ಸಾಮಾನ್ಯ ಸ್ಥಾಯಿ ಸಮಿತಿಯ ಸದಸ್ಯರಾದ ವಿಜು ಚಂಗಪ್ಪ, ಲೀಲಾವತಿ, ಅನಂತ್ ಕುಮಾರ್, ಜಯಣ್ಣ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಧರ್ಮಪ್ಪ, ತಾ.ಪಂ. ಸದಸ್ಯೆ ತಂಗಮ್ಮ, ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.