ಸೋಮವಾರಪೇಟೆ, ನ. 23: ಕೇವಲ ಭಾಷಣಗಳಿಂದ ಮಾತ್ರ ಕನ್ನಡ ಭಾಷೆಯ ಉಳಿವು ಅಸಾಧ್ಯ. ಸರ್ಕಾರಗಳು ಭಾಷಾ ಅಭಿವೃದ್ಧಿ-ಉಳಿವಿಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಉಪನ್ಯಾಸಕ ಸೋಮಶೇಖರ್ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಗೌಡಳ್ಳಿ ಶ್ರೀ ನವದುರ್ಗಾಪರಮೇಶ್ವರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕರ್ನಾಟಕದಲ್ಲಿ ಕನ್ನಡ ಅಸ್ಪøಶ್ಯ ಭಾಷೆಯಾಗುತ್ತಿರುವದು ದುರಂತ. ಕನ್ನಡ ಭಾಷೆ ಉಳಿದಿರುವದು ಗ್ರಾಮೀಣ ಭಾಗದಲ್ಲಿ. ಆದರೆ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ.
ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಭಿಯಿಂದ ಸರ್ಕಾರಿ ಶಾಲೆಗಳು ಮುಚ್ಚಲು ಕಾರಣವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ನಿಯಂತ್ರಣಕ್ಕೆ ಸರ್ಕಾರ ವಿಶೇಷ ಮಸೂದೆಯನ್ನು ತರುವದು ಅನಿವಾರ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗೌಡಳ್ಳಿ ವಿದ್ಯಾಸಂಸ್ಥೆಯ ಮಾಜಿ ಅಧ್ಯಕ್ಷ ಕೆ.ಎಸ್. ನಿಂಗಪ್ಪ ಅವರನ್ನು ಸನ್ಮಾನಿಸ ಲಾಯಿತು.
ವೇದಿಕೆಯಲ್ಲಿ ನಿವೃತ್ತ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹಾಲೇ ಬೇಲೂರು ನಿರ್ವಾಣಿಶೆಟ್ಟಿ, ಗೌಡಳ್ಳಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಬಿ. ಭರತ್ ಕುಮಾರ್, ದೇವಾಲಯ ಸಮಿತಿ ಅಧ್ಯಕ್ಷ ಹೆಚ್.ಆರ್. ಮುತ್ತಣ್ಣ, ನಿವೃತ್ತ ಮುಖ್ಯ ಶಿಕ್ಷಕರಾದ ಕೊಮಾರಿಗೌಡ, ಗುಂಡೇಗೌಡ, ಶಿಕ್ಷಕ ಮಹೇಶ್ ಉಪಸ್ಥಿತರಿದ್ದರು.