ಹೆಬ್ಬಾಲೆ, ನ. 25: ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡಾ ಕ್ಷೇತ್ರದ ಬಗ್ಗೆ ಹೆಚ್ಚಿನ ಜ್ಞಾನವನ್ನು ಹೊಂದುವ ಮೂಲಕ ವೃತ್ತಿಕೌಶಲ್ಯವನ್ನು ಅಭಿವೃದ್ಧಿ ಪಡಿಸಿ ಕೊಳ್ಳಬೇಕು ಎಂದು ಸೋಮವಾರ ಪೇಟೆ ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ಎಸ್.ಟಿ. ವೆಂಕಟೇಶ್ ಹೇಳಿದರು.

ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ತಾಲ್ಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಶಿರಂಗಾಲ ಪಿಯು ಕಾಲೇಜಿನಲ್ಲಿ ಏರ್ಪಡಿಸಿದ್ದ ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.

ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಪ್ರೀತಿ ಶಿಕ್ಷಕರೆಂದರೆ ದೈಹಿಕ ಶಿಕ್ಷಣ ಶಿಕ್ಷಕರು. ಇವರು ಉತ್ತಮವಾಗಿ ಕಾರ್ಯನಿರ್ವಹಿಸಿದರೆ ಶಾಲೆ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕಿ ಕಾವೇರಮ್ಮ ಮಾತನಾಡಿ, ದೈಹಿಕ ಶಿಕ್ಷಣ ಅನೇಕ ಪ್ರಕಾರದ ವಿವಿಧ ಸ್ಪರ್ಧಾತ್ಮಕವಾದ ಚಟುವಟಿಕೆಗಳನ್ನು ತನ್ನ ಗರ್ಭದಲ್ಲಿ ಅಡಗಿಸಿಟ್ಟುಕೊಂಡಿದೆ ಎಂದರು. ದೈಹಿಕ ಶಿಕ್ಷಣ ಅಂದರೆ ಕೇವಲ ಕ್ರೀಡೆ ಮಾತ್ರ ಅಲ್ಲ, ಅದು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವದ ವಿಕಸನಕ್ಕೆ ಪೂರಕವಾದ ಶಿಕ್ಷಣ ವಾಗಿದೆ ಎಂದರು. ಶಿಕ್ಷಣದ ಅವಿಭಾಜ್ಯ ಅಂಗ ದೈಹಿಕ ಶಿಕ್ಷಣವಾಗಿದೆ ಎಂದು ಹೇಳಿದರು.

ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷ್ಮಣ ಮಾತನಾಡಿ, ದೈಹಿಕ ಶಿಕ್ಷಣ ಶಿಕ್ಷಕರು ತಮ್ಮ ವೃತ್ತಿಯನ್ನು ಗೌರವಿಸಿ ಪ್ರೀತಿಸಬೇಕು ಎಂದರು. ಮನುಷ್ಯನ ಮೂಲ ಪ್ರವೃತ್ತಿಗಳಲ್ಲಿ ಆಟವು ಒಂದು ಆಟಗಳು ವ್ಯಕ್ತಿಗೆ ಸ್ವಾತಂತ್ರ್ಯವನ್ನು ಮತ್ತು ಸಂತೋಷವನ್ನು ನೀಡುತ್ತವೆ ಎಂದು ಹೇಳಿದರು. ಕುಶಾಲನಗರ ಸರ್ಕಾರಿ ಪಿಯು ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಡಾ. ಸದಾಶಿವಯ್ಯ ಎಸ್. ಪಲ್ಲೇದ್ ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ ಕುರಿತು ಮಾಹಿತಿ ನೀಡಿದರು.

ಶಿರಂಗಾಲ ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಯ್ಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನಿಕಟ ಪೂರ್ವ ಅಧ್ಯಕ್ಷ ಪರಮೇಶ್ವಪ್ಪ, ಉಪನ್ಯಾಸಕ ಹಂಡ್ರಂಗಿ ನಾಗರಾಜು, ದೈಹಿಕ ಶಿಕ್ಷಣ ಶಿಕ್ಷಕ ಅಂಥೋಣಿ ಪ್ರಭುರಾಜ್, ರಾಜಪ್ಪ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ನಿರೂಪಿಸಿದರು.

ಇದೇ ಸಂದರ್ಭ ಪಿಎಚ್ಡಿ ಪದವಿ ಪಡೆದ ದೈಹಿಕ ಶಿಕ್ಷಣ ಶಿಕ್ಷಕ ಸದಾಶಿವಯ್ಯ ಎಸ್.ಪಲ್ಲೇದ್ ಹಾಗೂ ಐಗೂರು ಪ್ರೌಢಶಾಲೆ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ರಾಜಪ್ಪ ಅವರನ್ನು ಸನ್ಮಾನಿಸಲಾಯಿತು.