ಕುಶಾಲನಗರ, ಡಿ. 15: ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತನ ಹತ್ಯೆಯನ್ನು ಖಂಡಿಸಿ ಸಂಘ ಪರಿವಾರದ ಆಶ್ರಯದಲ್ಲಿ ಕುಶಾಲ ನಗರದಲ್ಲಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಯಿತು.

ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದರು. ಪಿಎಫ್‍ಐ ಸಂಘಟನೆಯನ್ನು ಕೂಡಲೇ ನಿಷೇಧಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ರಾಜ್ಯದ ಕಾಂಗ್ರೆಸ್ ಸರಕಾರದ ಈ ಅವಧಿಯಲ್ಲಿ ಹಲವು ಮಂದಿ ಹಿಂದುಪರ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಕಗ್ಗೊಲೆಯಾಗಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರ ಇದಕ್ಕೆ ಪರೋಕ್ಷವಾಗಿ ಸಹಕರಿಸುತ್ತಿರುವ ಕಾರಣ ಈ ದೌರ್ಜನ್ಯ ಮತ್ತಷ್ಟು ಹೆಚ್ಚುತ್ತಿದೆ ಎಂದು ನುಡಿದರು.

ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೇಣುಕಾ, ಸದಸ್ಯರಾದ ಲಲಿತಾ, ಎಂ.ಎಂ. ಚರಣ್, ಜಿ.ಪಂ. ಸದಸ್ಯೆ ಮಂಜುಳಾ, ಹಿಂದು ಜಾಗರಣಾ ವೇದಿಕೆ ಜಿಲ್ಲಾ ಸಂಚಾಲಕ ಮಂಜು, ನಗರ ಬಿಜೆಪಿ ಅಧ್ಯಕ್ಷ ಕೆ.ಜಿ. ಮನು, ತಾಲೂಕು ಅಧ್ಯಕ್ಷ ಎಂ.ಎನ್. ಕುಮಾರಪ್ಪ, ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ಪ್ರಮುಖರಾದ ಜಿ.ಎಲ್. ನಾಗರಾಜ್, ಭಾಸ್ಕರ್ ನಾಯಕ್, ಎಂ.ವಿ. ನಾರಾಯಣ, ಹೆಚ್.ಎನ್. ರಾಮಚಂದ್ರ, ನವನೀತ್, ಅನೀಶ್ ಮತ್ತಿತರರು ಇದ್ದರು.