ಮಡಿಕೇರಿ, ಡಿ. 23: ಬಿಜಾಪುರದ ವಿಜಯಪುರದಲ್ಲಿ ಇತ್ತೀಚೆಗೆ ನಡೆದ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಅಮಾನವೀಯ ಘಟನೆಯಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿರುವ ಜಿಲ್ಲಾ ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಬಾಲಕಿ ದಾನೇಶ್ವರಿ (ದಾನಮ್ಮ) ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡನೀಯವಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಬಿಗಿಗೊಳಿಸಬೇಕು. ದಾನಮ್ಮಳನ್ನು ಕೊಲೆ ಮಾಡಿದ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಮಾಡಬೇಕು. ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಹೇಳಿಕೆಯಂತೆ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಪ್ರಮುಖ ಆರೋಪಿ ದೀಪಕ್ ಮುಳಸಾವಳಗಿ ಸೇರಿದಂತೆ ಮೂವರು ತಲೆ ಮರೆಸಿಕೊಂಡಿದ್ದು, ಇವರನ್ನು ತಕ್ಷಣ ಬಂಧಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಅತ್ಯಾಚಾರ, ಹತ್ಯೆ, ಆತ್ಮಹತ್ಯೆ, ಅಧಿಕಾರಿಗಳ ರಾಜೀನಾಮೆ ಸೇರಿದಂತೆ ಅನೇಕ ನಕರಾತ್ಮಕ ಘಟನೆಗಳು ನಡೆಯುತ್ತಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವೇ ಕಾರಣವಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ರಾಜ್ಯ ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಭಟನಾಕರರು ಆರೋಪಿಸಿದರು.

ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾಧ್ಯಕ್ಷ ಎಸ್.ಸಿ. ಸತೀಶ್ ನೇತೃತ್ವ ದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಾಂತೆಯಂಡ ರವಿಕುಶಾಲಪ್ಪ, ರಾಬಿನ್ ದೇವಯ್ಯ, ವಿ.ಕೆ. ಲೋಕೇಶ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿಲ್ಲಾ ವಕ್ತಾರ ನಾಪಂಡ ರವಿಕಾಳಪ್ಪ, ಬಿಜೆಪಿ ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ಕಾಂಗೀರ ಸತೀಶ್, ಡೀನ್ ಬೋಪಣ್ಣ, ಶಜಿಲ್ ಕೃಷ್ಣ, ಬಿ.ಕೆ. ಅರುಣ್ ಕುಮಾರ್, ಮಹೇಶ್ ಜೈನಿ, ಬಿ.ಕೆ. ಜಗದೀಶ್ ಹಾಗೂ ಇನ್ನಿತರರು ಇದ್ದರು.