ಮೂರ್ನಾಡು, ಜ. 12: ಮಾನಸಿಕ ಮತ್ತು ಶಾರೀರಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರ ನೀಡುತ್ತದೆ ಎಂದು ಕೋಡಂಬೂರು ಕಾಫಿ ಬೆಳೆಗಾರ ಪೃಥ್ವಿ ದೇವಯ್ಯ ಹೇಳಿದರು.ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾದ ಕ್ರೀಡಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ನಿವೃತ್ತ ಶಿಕ್ಷಕಿ ಕಮಲು ಮುದ್ದಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡು ಶಿಸ್ತನ್ನು ಮೈಗೂಡಿಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪೋಷಕರು ಮಕ್ಕಳಿಗಾಗಿ ಕಷ್ಟಪಡುತ್ತಿರುವದನ್ನು ಸ್ಮರಿಸಿಕೊಂಡು ಉತ್ತಮ ಸಾಧನೆ ಮಾಡುವತ್ತ ವಿದ್ಯಾರ್ಥಿಗಳು ಚಿತ್ತ ಹರಿಸಬೇಕು. ಕ್ರೀಡೆಯಲ್ಲಿ ಅವಿರತ ಪ್ರಯತ್ನವಿದ್ದಾಗ ಮಾತ್ರ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಲು ಸಾಧ್ಯ ಎಂದು ಹೇಳಿದರು.
ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಪಳಂಗಂಡ ಮುದ್ದಪ್ಪ, ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ, ಖಜಾಂಚಿ ಪುದಿಯೊಕ್ಕಡ ಸಿ. ಸುಬ್ರಮಣಿ, ನಿರ್ದೇಶಕರಾದ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ನಂದೇಟಿರ ರಾಜ ಮಾದಪ್ಪ, ಬಡುವಂಡ ಸುಬ್ರಮಣಿ, ಈರಮಂಡ ಸೋಮಣ್ಣ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಭಾಗೀರಥಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ, ಪ್ರೌಢಶಾಲೆ ಮುಖ್ಯ ಶಿಕ್ಷಕಿ ಎ.ಎಸ್. ರಶ್ಮಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಎಸ್.ಡಿ. ಪ್ರಶಾಂತ್, ಶಾಲಾ ದೈಹಿಕ ಶಿಕ್ಷಕರು, ಶಾಲಾ ಶಿಕ್ಷಕರು ಹಾಗೂ ಉಪನ್ಯಾಸಕರು ಹಾಜರಿದ್ದರು. ವಿದ್ಯಾರ್ಥಿಗಳು ಪಥಸಂಚಲನ ನಡೆಸಿ ಮುಖ್ಯ ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಿಸಿದರು.