ಸೋಮವಾರಪೇಟೆ, ಫೆ. 5: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರ ಗೊಳ್ಳುತ್ತಿರುವ ಶ್ರೀ ಬಸವೇಶ್ವರ ದೇವಾಲಯ ನಿರ್ಮಾಣಕ್ಕೆ ಗ್ರಾಮಸ್ಥರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.ಅನೇಕ ದಶಕಗಳ ಹಿಂದೆ ನಿರ್ಮಿಸಲ್ಪಟ್ಟಿದ್ದ ದೇವಾಲಯ ದುಸ್ಥಿತಿಗೆ ತಲುಪಿದ್ದ ಹಿನ್ನೆಲೆ ದೇವಾಲಯ ಸಮಿತಿ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಸೇರಿ ಅಷ್ಟಮಂಗಲ ಪ್ರಶ್ನೆ ಆಯೋಜಿಸಿದ ನಂತರ ನೂತನ ದೇವಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.ಸಕಲೇಶಪುರದ ವೇದಬ್ರಹ್ಮ ಶ್ರೀಮಹೇಶ್ ಭಟ್ ನೇತೃತ್ವದಲ್ಲಿ ದೇವಾಲಯ ಆವರಣದಲ್ಲಿ ಅರ್ಚಕ ರಿಂದ ಮೃತ್ಯುಂಜಯ ಹೋಮ, ಗಣಪತಿ ಹೋಮ, ಭೂ ವರಾಹ, ದುರ್ಗಾಹೋಮ, ಪೂರ್ಣಾಹುತಿ, ಗಣಹೋಮ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ನೆರವೇರಿದವು.

ದೇವಾಲಯ ಸಮಿತಿ ಅಧ್ಯಕ್ಷ ಹೆಚ್.ಕೆ. ಲೋಕೇಶ್, ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ, ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ತಾ.ಪಂ. ಸದಸ್ಯೆ ಸವಿತಾ ಈರಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಅರೆಯೂರು ಜಯಣ್ಣ, ದೇವಾಲಯ ಸಮಿತಿ ಉಪಾಧ್ಯಕ್ಷ ಪೊನ್ನಪ್ಪ, ಕಾರ್ಯದರ್ಶಿ ಬೋಜೇಗೌಡ ಸೇರಿದಂತೆ ಸದಸ್ಯರು ಹಾಗೂ ಗ್ರಾಮದ ಪ್ರಮುಖರು ನೂತನ ದೇವಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.

(ಮೊದಲ ಪುಟದಿಂದ) ಮಾಜಿ ಸಚಿವ ಬಿ.ಎ. ಜೀವಿಜಯ, ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ತಾ.ಪಂ. ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ, ಗ್ರಾ.ಪಂ. ಸದಸ್ಯ ವಿನೋದ್‍ಕುಮಾರ್, ಸದಸ್ಯೆ ಲಕ್ಷ್ಮಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಾಲಯ ಸಮಿತಿ ಅಧ್ಯಕ್ಷ ಲೋಕೇಶ್ ಮಾತನಾಡಿ, ಹೊಸಳ್ಳಿ ಗ್ರಾಮದಲ್ಲಿ ಅನೇಕ ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ದೇವಾಲಯ ವನ್ನು ಜೀರ್ಣೋದ್ಧಾರ ಮಾಡಲು ಗ್ರಾಮಸ್ಥರು ತೀರ್ಮಾನಿಸಿದ್ದು, ಅದರಂತೆ ಗ್ರಾಮಸ್ಥರು ಹಾಗೂ ದಾನಿಗಳ ಸಹಕಾರದಿಂದ ರೂ. 40ಲಕ್ಷ ವೆಚ್ಚದಲ್ಲಿ ಹೊಸಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ, ಶ್ರೀನವದುರ್ಗಿ, ಶ್ರೀ ಗಣಪತಿ, ಶ್ರೀ ನಾಗದೇವತೆಗಳ ದೇವಾಲಯ ನಿರ್ಮಾಣಗೊಳ್ಳಲಿದೆ ಎಂದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿ.ಪಂ. ಮಾಜೀ ಅಧ್ಯಕ್ಷ ವಿ.ಎಂ. ವಿಜಯ ಮಾತನಾಡಿ, ದೇವಾಲಯಗಳ ನಿರ್ಮಾಣದಿಂದ ಗ್ರಾಮದಲ್ಲಿ ಶಾಂತಿ, ಸೌಹಾರ್ಧತೆ, ಸಾಮರಸ್ಯ ವೃದ್ಧಿಸುತ್ತದೆ ಎಂದರು.