ಮಡಿಕೇರಿ, ಫೆ. 4: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದ ಜನರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಬಗ್ಗೆ ಅರಿವು ಮೂಡಿಸಲು ಸಹಕಾರಿಯಾಗುತ್ತಿದೆ ಎಂದು ಪೆರಾಜೆ ಜ್ಯೋತಿ ವಿದ್ಯಾ ಸಂಘದ ಅಧ್ಯಕ್ಷ ಡಾ. ಎನ್.ಎ. ಜ್ಞಾನೇಶ್ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪೆರಾಜೆಯ ಜ್ಯೋತಿ ವಿದ್ಯಾಸಂಘದ ಭವನದಲ್ಲಿ ನಡೆದ ಶ್ರೀ ಸಂಪಾಜೆ ಸಣ್ಣಯ್ಯ ಪಟೇಲ್ ದತ್ತಿ ಹಾಗೂ ಪುಸ್ತಕ ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಮಾತನಾಡಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವದರೊಂದಿಗೆ ವಿದ್ಯಾರ್ಥಿಗಳಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಶಿಕ್ಷಣದೊಂದಿಗೆ ಸಾಹಿತ್ಯ ಮತ್ತು ಕನ್ನಡ ಭಾಷೆಯ ಬೆಳವಣಿಗೆಗೆ ಶ್ರಮಿಸುತ್ತಿದೆ ಎಂದರು.
ಶ್ರೀ ಸಂಪಾಜೆ ಸಣ್ಣಯ್ಯ ಪಟೇಲ್ ದತ್ತಿ ಕಾರ್ಯಕ್ರಮದಲ್ಲಿ ಗ್ರಾಮೀಣ ಜಾನಪದ ಸೊಗಡು ಎಂಬ ವಿಷಯದ ಬಗ್ಗೆ ಸಹನಾ ಕಾಂತಬೈಲು ಉಪನ್ಯಾಸ ನೀಡಿದರು. ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮಿ ಧರಣೇಂದ್ರ, ತಾ.ಪಂ. ಸದಸ್ಯರಾದ ನಾಗೇಶ್ ಕುಂದಲ್ಪಾಡಿ, ಕಸಾಪ ಸಂಪಾಜೆ ಹೋಬಳಿ ಘಟಕದ ನಿಕಟಪೂರ್ವ ಅಧ್ಯಕ್ಷ ಲೋಕನಾಥ ಅಮೆಚೂರು, ಪೆರಾಜೆ ಜ್ಯೋತಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೆ. ಪುರುಷೋತ್ತಮ ಮಾತನಾಡಿದರು. ಕಾರ್ಯಕ್ರಮವನ್ನು ಶಿಕ್ಷಕ ದೊಡ್ಡಣ್ಣ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಕಸಾಪ ಸದಸ್ಯರು ಪಾಲ್ಗೊಂಡಿದ್ದರು.