ಹೆಬ್ಬಾಲೆ, ಫೆ. 17 : ಸಮೀಪದ ತೊರೆನೂರು ಗ್ರಾಮದಲ್ಲಿ ಒಕ್ಕಲಿಗರ ಯುವಕ ಸಂಘದ ವತಿಯಿಂದ ನಿರ್ಮಿಸಿರುವ ಬಸ್ ತಂಗುದಾಣವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾರ್ವಜನಿಕರ ಸೇವೆಗೆ ಸಮರ್ಪಿಸಿದರು.

ನಂತರ ಬಸವೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸ್ಮರಣೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂಘ ಸಂಸ್ಥೆಗಳು ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಸಮಾಜಕ್ಕೆ ಒಳಿತಾಗುವ ಕಾರ್ಯವನ್ನು ಸಂಘದ ಮೂಲಕ ಕೈಗೊಂಡು ಗ್ರಾಮದ ಏಳಿಗೆಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಕೆ.ಎಸ್.ಕೃಷ್ಣೇಗೌಡ ಮಾತನಾಡಿ, ಸಾರ್ವಜನಿಕರ ಉಪಯೋಗಕ್ಕಾಗಿ ರೂ. 1.5 ಲಕ್ಷ ವೆಚ್ಚದಲ್ಲಿ ಬಸು ತಂಗುದಾಣವನ್ನು ನಿರ್ಮಿಸಲಾಗಿದೆ ಎಂದರು.

ತೊರೆನೂರು ವಿರಕ್ತಮಠದ ಶ್ರೀ ಮಲ್ಲೇಶ ಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಿದ್ದರು. ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ಪಿ.ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಹಾಸನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ.ಶಂಭುನಾಥ ಸ್ವಾಮೀಜಿ, ಮಾಜಿ ಶಾಸಕ ಎಸ್.ಜಿ.ಮೇದಪ್ಪ, ಜಿ.ಪಂ.ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಆರ್.ಶ್ರೀನಿವಾಸ್, ಸದಸ್ಯೆ ಕೆ.ಪಿ.ಚಂದ್ರಕಲಾ, ಬಿ.ಜಿ.ದೀಪಕ್, ಮಾಜಿ ಸದಸ್ಯ ವಿ.ಪಿ.ಶಶಿಧರ್, ತಾ.ಪಂ. ಸದಸ್ಯ ಎನ್.ಎಸ್.ಜಯಣ್ಣ, ಗ್ರಾ.ಪಂ. ಅಧ್ಯಕ್ಷ ಕೆ.ಬಿ. ದೇವರಾಜ್, ಉಪಾಧ್ಯಕ್ಷೆ ದಾಕ್ಷಾಯಿಣಿ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎ.ಚಂಗಪ್ಪ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗ್ರಾಮದ ಮಠದ ಬಳಿಯಿಂದ ವಾದ್ಯಗೋಷ್ಠಿಗಳೊಂದಿಗೆ ಹಾಗೂ ಪೂರ್ಣಕುಂಭ ಹೊತ್ತ ಮಹಿಳೆಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಸ್ವಾಮೀಜಿ ಅವರನ್ನು ಮೆರವಣಿಗೆ ಮೂಲಕ ಕಾರ್ಯಕ್ರಮ ವೇದಿಕೆ ಕರೆತರಲಾಯಿತು.