ಮಡಿಕೇರಿ, ಫೆ. 17: ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಸಮಾವೇಶ ತಾ. 27 ರಂದು ಕುಶಾಲನಗರದ ರೈತ ಭವನದಲ್ಲಿ ನಡೆಯಲಿದೆ ಎಂದು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಹೆಚ್.ಯು. ಇಸಾಕ್ ಖಾನ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್, ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಸಯ್ಯದ್ ಮುಹೀದ್ ಅಲ್ತಾಫ್, ರಾಷ್ಟ್ರ ಉಪಾಧ್ಯಕ್ಷ ಪಿ.ಜಿ.ಆರ್. ಸಿಂಧ್ಯ, ಮಾಜಿ ಸಂಸದರು ಹಾಗೂ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್. ವಿಶ್ವನಾಥ್, ಮೈಸೂರು-ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು ಹಾಗೂ ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಉಸ್ತುವಾರಿ ಜಿ.ಟಿ. ದೇವೇಗೌಡ, ಕ್ರಿಶ್ಚಿಯನ್ ವಿಂಗ್‍ನ ರಾಜ್ಯ ಅಧ್ಯಕ್ಷ ವಿಲ್ಸನ್ ರೆಡ್ಡಿ, ಮಾಜಿ ಸಚಿವರು ಹಾಗೂ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಬಿ.ಎ. ಜೀವಿಜಯ, ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಸೇರಿದಂತೆ ಜಿಲ್ಲೆ ಹಾಗೂ ರಾಜ್ಯಮಟ್ಟದ ನಾಯಕರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಜೋಕಿಂ ವಾಸ್ ಮಾತನಾಡಿ, ತಾ. 17 ರಂದು ಬೆಂಗಳೂರಿನಲ್ಲಿ ಜೆಡಿಎಸ್ ಮತ್ತು ಬಿಎಸ್‍ಪಿಯ ವಿಕಾಸ ಪರ್ವ ಸಮಾವೇಶ ನಡೆಯಲಿದ್ದು, ಕೊಡಗಿನಿಂದ 5 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದರು.

ಪಕ್ಷದ ಅಲ್ಪಸಂಖ್ಯಾತರ ಘÀಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಆಲಿ ಮಾತನಾಡಿ, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯಲಿದ್ದು, ಜೆಡಿಎಸ್‍ಗೆ ಅಲ್ಪಸಂಖ್ಯಾತರು ಶಕ್ತಿ ತುಂಬಬೇಕೆಂದರು.

ಗೋಷ್ಠಿಯಲ್ಲಿ ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಡಿಸಿಲ್ವಾ ಹಾಗೂ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಅಜೀಜ್ ಉಪಸ್ಥಿತರಿದ್ದರು.