ಶನಿವಾರಸಂತೆ, ಫೆ. 16: ಪಟ್ಟಣ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ವಿಚಾರದಲ್ಲಿ ಉಂಟಾಗುವ ಸಮಸ್ಯೆ ನಿವಾರಣೆಗೆ ಪರಿಹಾರ ನೀಡುವ ಸಲುವಾಗಿ ಜಿಲ್ಲಾ ಸ್ವಚ್ಛ ಭಾರತ್ ಮಿಶನ್ ಇಲಾಖೆ ವತಿಯಿಂದ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಇಲಾಖೆ ಅಧಿಕಾರಿ ಪೆಮ್ಮಯ್ಯ ಹೇಳಿದರು. ಗ್ರಾ.ಪಂ. ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಗೌಸ್ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ ಕೇಂದ್ರ ಸರಕಾರ ಅನುಷ್ಠಾನಗೊಳಿಸಿರುವ ಸ್ವಚ್ಛ ಭಾರತ್ ಮಿಶನ್ ಯೋಜನೆಯಡಿ ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಘನ ತ್ಯಾಜ್ಯ ವಿಂಗಡಣೆ ಕ್ರಮದಿಂದ ಸಮರ್ಪಕವಾಗಿ ಕಸ ವಿಲೇವಾರಿ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗಿದೆ. 2ನೇ ಹಂತವಾಗಿ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಸೇರಿದಂತೆ 5 ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೆಮ್ಮಯ್ಯ ತಿಳಿಸಿದರು. ಸಭೆಯಲ್ಲಿ ಪಟ್ಟಣದಲ್ಲಿ ಬಾಕಿಯಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆದು ಶೀಘ್ರ ಪೂರೈಸುವಂತೆ ತೀರ್ಮಾನಿಸ ಲಾಯಿತು. ಪಂಚಾಯಿತಿ ಉಪಾಧ್ಯಕ್ಷೆ ಗೀತಾ, ಸದಸ್ಯರಾದ ಆದಿತ್ಯ ಗೌಡ, ಸರ್ದಾರ್ ಅಹಮ್ಮದ್, ಹೆಚ್.ಆರ್. ಹರೀಶ್, ರಜನಿ, ಉಷಾ, ಹೇಮಾವತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಧನಂಜಯ್, ಕಾರ್ಯದರ್ಶಿ ತಮ್ಮಯ್ಯಾಚಾರ್, ಸಿಬ್ಬಂದಿ ಉಪಸ್ಥಿತರಿದ್ದರು.