ಸೋಮವಾರಪೇಟೆ, ಫೆ. 18: ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ಇಲ್ಲಿನ ಜೆ.ಎಮ್.ಎಫ್.ಸಿ. ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ಎಫ್. ದೊಡ್ಡಮನಿ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಕ್ರಿಯೇಟಿವ್ ಅಕಾಡೆಮಿ ಪೂರ್ವ ಪ್ರಾಥಮಿಕ ಶಾಲೆಯ ವತಿಯಿಂದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದೊಂದಿಗೆ ನೈತಿಕ ಶಿಕ್ಷಣವನ್ನು ಕಲಿಸಬೇಕು. ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯಿಂದ ಬದುಕುವಂತೆ ಮಾಡುವದೇ ನಿಜವಾದ ಶಿಕ್ಷಣವೆಂದು ನುಡಿದರು.

ಕಿರಿಯ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಮಾತನಾಡಿ, ಶಿಕ್ಷಣದ ಮೂಲಕ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕು. ದಾರ್ಶನಿಕ ಹಾಗೂ ಮಹಾನ್ ಪುರುಷರ ಸಾಧನೆಗಳನ್ನು ಮಕ್ಕಳಿಗೆ ತಿಳಿಸಬೇಕು. ಮಕ್ಕಳು ಮಾಡುವ ಕೆಟ್ಟ ಕೆಲಸಗಳಿಗೆ ಪ್ರೋತ್ಸಾಹ ನೀಡಬಾರದು ಎಂದು ಕಿವಿಮಾತು ಹೇಳಿದರು. ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಮಾತನಾಡಿ, ಅಪರಾಧ ಮುಕ್ತ ಸಮಾಜ ನಿರ್ಮಾಣವಾಗಬೇಕಾದರೆ ಪೋಷಕರ ಪಾತ್ರ ಮುಖ್ಯ. ಇಂದು ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದ್ದು, ಇದಕ್ಕೆ ತಡೆ ಹಾಕಬೇಕಿದೆ. ಮಕ್ಕಳು ಮಾನಸಿಕವಾಗಿ ಬೆಳೆಯ ಬೇಕಾಗಿದ್ದು ಅವರ ನಡವಳಿಕೆ ತಿದ್ದಬೇಕಾದ ಅನಿವಾರ್ಯತೆ ಇದೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ಕಾಫಿ ಬೆಳೆಗಾರ ಹಾಗೂ ಹೈಡ್ರೊ ಎಲೆಕ್ಟ್ರಿಕ್ ಪ್ರಾಜೆಕ್ಟ್ ಮಾಲೀಕ ಸನತ್, ಕ್ರಿಯೇಟಿವ್ ಅಕಾಡೆಮಿ ಅಧ್ಯಕ್ಷ ಮಹೇಶ್, ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ದಿವ್ಯ ಮಹೇಶ್ ಉಪಸ್ಥಿತರಿದ್ದರು.