ಬೆಂಗಳೂರು, ಫೆ. 20: ಭಾಗಮಂಡಲದ ಶ್ರೀ ಭಗಂಡೇಶ್ವರ ಹಾಗೂ ತಲಕಾವೇರಿ ಪುಣ್ಯ ಕ್ಷೇತ್ರಗಳ ಪಾವಿತ್ರ್ಯಕ್ಕೆ ಧಕ್ಕೆ ಬರದಂತೆ ದೇವಸ್ಥಾನ ಆಡಳಿತ ಮಂಡಳಿ, ಜಿಲ್ಲಾಡಳಿತ ಹಾಗೂ ಆರಕ್ಷಕ ಇಲಾಖೆಯ ಸಹಯೋಗದಲ್ಲಿ ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಲಿಖಿತ ಉತ್ತರ ನೀಡಿದ್ದಾರೆ.ಎಂ.ಎಲ್.ಸಿ. ವೀಣಾ ಅಚ್ಚಯ್ಯ ಅವರು ಶ್ರೀ ಭಗಂಡೇಶ್ವರ ಹಾಗೂ ತಲಕಾವೇರಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ಬರುವಂತಹ ಘಟನೆಗಳು ಪ್ರವಾಸಿಗರು ಹಾಗೂ ಯಾತ್ರಾರ್ಥಿಗಳಿಂದ ನಡೆಯುತ್ತಿರುವದು ಸರ್ಕಾರದ ಗಮನಕ್ಕೆ ಬಂದಿದೆಯೇ, ಬಂದಿದ್ದರೆ ಯಾವ ಕ್ರಮ

(ಮೊದಲ ಪುಟದಿಂದ) ಕೈಗೊಳ್ಳಲಾಗಿದೆ ಎಂದು ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

ತಲಕಾವೇರಿ ಹಾಗೂ ಶ್ರೀ ಭಗಂಡೇಶ್ವರ ದೇವಾಲಯಗಳು ಧಾರ್ಮಿಕ ದತ್ತಿ ಇಲಾಖೆಯ ಸಮೂಹ ‘ಎ’ ಪ್ರವರ್ಗದ ಅಧಿಸೂಚಿತ ದೇವಾಲಯಗಳಾಗಿರುತ್ತದೆ. ಈ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಬ್ಯಾರಿಕೇಡ್ ಅಳವಡಿಕೆ ಹಾಗೂ ಶುಚಿತ್ವವನ್ನು ಕಾಪಾಡಲು ಅಗತ್ಯ ಕ್ರಮ ವಹಿಸಲಾಗುತ್ತಿದ್ದು, ಕುಡಿಯುವ ನೀರಿನ ವ್ಯವಸ್ಥೆ ಪ್ರತ್ಯೇಕ ಶೌಚಾಲಯ, ಬಟ್ಟೆ ಬದಲಾಯಿಸುವ ಕೊಠಡಿಗಳ ವ್ಯವಸ್ಥೆ, ಸುರಕ್ಷತೆಗಾಗಿ ಸಿ.ಸಿ. ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ.