ಮಡಿಕೇರಿ, ಫೆ. 22: ಮುಂಬರುವ ಕರ್ನಾಟಕ ವಿಧಾನ ಸಭಾ 2018ರ ಚುನಾವಣೆಯಲ್ಲಿ ಮತದಾರರು ಮತ ದಾನದಲ್ಲಿ ಪಾಲ್ಗೊಳ್ಳು ವಿಕೆಯ ಕುರಿತಂತೆ ಜಾಗೃತಿ ಮೂಡಿಸಲು ರಚನೆ ಯಾಗಿರುವ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯ ಲಾಂಛನವನ್ನು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಬಿಡುಗಡೆಗೊಳಿಸಿದರು.

ನಗರದ ಕೋಟೆ ಹಳೇ ಸಭಾಂಗಣದಲ್ಲಿ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಅವರು ಚುನಾವಣೆಯಲ್ಲಿ 18 ವರ್ಷ ಪೂರೈಸಿದ ನೋಂದಾಯಿತ ಎಲ್ಲಾ ಮತದಾರರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಭಾರತ ಚುನಾವಣಾ ಆಯೋಗ ನಿರ್ದೇಶನದಂತೆ ವಿಧಾನಸಭಾ ಚುನಾವಣೆಗೆ ಒಳಗೊಳ್ಳುವ ಸುಗಮ ಹಾಗೂ ನೈತಿಕ ಚುನಾವಣೆಯ ಧ್ಯೇಯದೊಂದಿಗೆ ಮುಕ್ತ ಪಾರದರ್ಶಕವಾಗಿ ಚುನವಾಣೆ ನಡೆಸಲು ಸಿದ್ಧತೆ ನಡೆಸಲಾಗಿದೆ.

ವಿಶೇಷವಾಗಿ ವಿಶೇಷ ಚೇತನ ಮತದಾರರು ಮುಕ್ತವಾಗಿ ಮತದಾನ ಮಾಡಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವದು ಎಂದು ಹೇಳಿದರು.

ಮತದಾರರ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿ ರಚಿಸಲಾಗಿದೆ. ಜಿಲ್ಲೆಯಲ್ಲಿನ ಮತದಾರರ ಪಟ್ಟಿಯಲ್ಲಿರುವ ಎಲ್ಲಾ ಮತದಾರರು ನಿರ್ಭಿತವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡುವ ನಿಟ್ಟಿನಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮ ನಡೆಸಲಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರ, ಯೋಜನಾ ನಿರ್ದೇಶಕ ಸಿದ್ದಲಿಂಗ ಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ, ಕಾರ್ಯಪಾಲಕ ಇಂಜಿನಿಯರ್ ರಾಜ್‍ಕುಮಾರ್ ರೆಡ್ಡಿ, ಹಿಂದುಳಿದ ವರ್ಗಗಳ ಅಲ್ಪ ಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ. ಸುರೇಶ್ ಇತರರು ಇದ್ದರು.