ಮಡಿಕೇರಿ, ಏ.2 : ಹದಿನೆಂಟು ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ತಾ. 14 ರ ವರೆಗೆ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ. ಹದಿನೆಂಟು ವರ್ಷ ಪೂರ್ಣಗೊಂಡವರು ಮತದಾನದಿಂದ ಯಾವದೇ ಕಾರಣಕ್ಕೂ ವಂಚಿತರಾಗಬಾರದು ಎಂಬ ಉದ್ದೇಶದಿಂದ ಚುನಾವಣಾ ಆಯೋಗ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾಗಲು ಅವಕಾಶ ಮಾಡಿದ್ದು, ಅರ್ಹರು ಈ ಅವಕಾಶ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೋರಿದ್ದಾರೆ.

ತಾ. 8 ರಂದು ಜಿಲ್ಲೆಯ ಬೂತ್ ಮಟ್ಟದಲ್ಲಿ, ತಹಶೀಲ್ದಾರರ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆ ಕುರಿತು ವಿಶೇಷ ಅಭಿಯಾನ ನಡೆಯಲಿದ್ದು, ಈ ಅವಕಾಶವನ್ನು ಹದಿನೆಂಟು ವರ್ಷ ಪೂರ್ಣಗೊಂಡವರು ಪಡೆದುಕೊಳ್ಳುವಂತಾಗಬೇಕು ಎಂದು ಅವರು ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳು ಸಭೆ-ಸಮಾರಂಭ ನಡೆಸಲು ಮತ್ತು ಪ್ರಚಾರಕ್ಕೆ ವಾಹನ ಬಳಸಲು ಆಯಾಯ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ(ಆರ್‍ಒ) ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಿದ 24 ಗಂಟೆಯೊಳಗೆ ಅನುಮತಿ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಬಸ್, ಕಾರು, ಹೀಗೆ ಯಾವುದೇ ರೀತಿಯಲ್ಲಿ 50 ಸಾವಿರ ರೂ ಮೇಲ್ಪಟ್ಟು ನಗದು ಹಣವನ್ನು ತೆಗೆದುಕೊಂಡು ಹೋಗುತ್ತಿದ್ದಲ್ಲಿ ದಾಖಲೆ ಸಲ್ಲಿಸಬೇಕಿದೆ. 10 ಲಕ್ಷಕ್ಕೂ ಹೆಚ್ಚು ನಗದು ಹಣ ತೆಗೆದುಕೊಂಡು ಹೋಗುತ್ತಿದ್ದಲ್ಲಿ ಆದಾಯ ತೆರಿಗೆ ಇಲಾಖೆಯ ಶಿಫಾರಸು ಪತ್ರ ಹೊಂದಿರಬೇಕು ಎಂದು ಅವರು ತಿಳಿಸಿದ್ದಾರೆ.