ಮಡಿಕೇರಿ, ಏ.5 : ಪ್ರಜಾಪ್ರಭುತ್ವ ಬಲಪಡಿಸುವ ನಿಟ್ಟಿನಲ್ಲಿ ಮತದಾನವು ಅತ್ಯಮೂಲ್ಯವಾಗಿದ್ದು, ಅರ್ಹರೆಲ್ಲರೂ ಮತದಾನ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ತಿಳಿಸಿದ್ದಾರೆ.

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಗುರುವಾರ ಬಿಎಲ್‍ಒ ಹಾಗೂ ಸಿಆರ್‍ಪಿಗಳಿಗೆ ವಿದ್ಯುನ್ಮಾನ ಮತಯಂತ್ರಗಳ ಕಾರ್ಯ ನಿರ್ವಹಣೆ ಕುರಿತು ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹದಿನೆಂಟು ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವ ಪ್ರಕ್ರಿಯೆ ನಿರಂತರವಾಗಿದ್ದರೂ ಸಹ, ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತಾಗಲು ಮತದಾರರ ಗುರುತಿನ ಚೀಟಿ ಪಡೆಯಬೇಕಿದೆ. ಆದ್ದರಿಂದ ಇದೇ ತಾ. 14ರ ವರೆಗೆ ಮತದಾರರ ಪಟ್ಟಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಸಿಇಒ ವಿವರಿಸಿದರು.

ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಗುರುತಿನ ಚೀಟಿ ಪಡೆದುಕೊಂಡಿರುವ ಬಗ್ಗೆ ತಿಳಿದುಕೊಳ್ಳುವಂತಾಗಬೇಕು. 18 ವರ್ಷ ಪೂರ್ಣಗೊಂಡಿರುವವರು ಮತದಾರರ ಪಟ್ಟಿಯಲ್ಲಿ ವಂಚಿತರಾಗಿದ್ದಲ್ಲಿ ಅಂತವರನ್ನು ಸೇರ್ಪಡೆ ಮಾಡಲು ಮುಂದಾಗಬೇಕು ಎಂದರು.

ತಹಶೀಲ್ದಾರ್ ಶಾರದಾಂಬ ಮಾತನಾಡಿ ವಾಸ ದೃಢೀಕರಣ ಸಂಬಂಧಿಸಿದಂತೆ ಜನಸ್ನೇಹಿ ಕೇಂದ್ರದಲ್ಲಿ ಪಡೆದುಕೊಳ್ಳಬಹುದಾಗಿದೆ. ಮತದಾರರ ಗುರುತಿನ ಚೀಟಿ ಪಡೆಯಲು ಅರ್ಜಿ ನಮೂನೆ 6,7,8 ನ್ನು ತಹಶೀಲ್ದಾರರ ಕಚೇರಿಗೆ ಸಲ್ಲಿಸಬೇಕಿದೆ ಎಂದು ತಿಳಿಸಿದರು.

ವಿದ್ಯುನ್ಮಾನ ಮತಯಂತ್ರ ತರಬೇತಿ ಅಧಿಕಾರಿ ಷಂಶುದ್ದಿನ್ ಅವರು ಕಂಟ್ರೋಲ್ ಯುನಿಟ್, ಬ್ಯಾಲೆಟ್ ಯುನಿಟ್, ವಿವಿ ಪ್ಯಾಟ್ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಸ್ವಾಮಿ ಮಾತನಾಡಿ ವಿಧಾನಸಭಾ ಚುನಾವಣೆಯಲ್ಲಿ ಬಿಎಲ್‍ಒಗಳ ಪಾತ್ರ ಮಹತ್ತರವಾಗಿದ್ದು, ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಅವರು ಕೋರಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್, ಉಪ ವಿಭಾಗಧಿಕಾರಿ ರಮೇಶ್ ಎಂ.ಕೊನರೆಡ್ಡಿ, ಜಿ.ಪಂ.ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ಸಾರ್ವಜಿನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಂಜುಳಾ, ತಾಲೂಕು ಸಹಾಯಕ ಶಿಶು ಅಭಿವೃದ್ಧಿü ಯೋಜನಾಧಿಕಾರಿಗಳಾದ ಸವಿತಾ, ಬೂತ್ ಮಟ್ಟದ ಅಧಿಕಾರಿಗಳು ಇತರರು ಇದ್ದರು.