ಮಡಿಕೇರಿ, ಏ. 12: ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಡಿಕೇರಿ ತಾಲೂಕು ಪಂಚಾಯಿತಿ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದ ಬಳಿ ಇರುವ ಎಸ್‍ಜಿಎಸ್‍ವೈ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸುವ ಸಮಾರಂಭ ನಡೆಯಿತು. ತಾ.ಪಂ. ಇಒ ಲಕ್ಷ್ಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಇತರರು ಇದ್ದರು.

ಸಭೆ ಆರಂಭಕ್ಕೂ ಮೊದಲು ತಾ.ಪಂ. ಕಚೇರಿಯಿಂದ ಮತದಾರರ ಜಾಗೃತಿ ಕುರಿತು ಮೆರವಣಿಗೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ತಾ.ಪಂ. ಇಒ ಲಕ್ಷ್ಮಿ ಅವರು 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಮತದಾನ ಮಾಡುವಂತಾಗಬೇಕು. ಇದರಿಂದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಲು ಸಾಧ್ಯ ಎಂದು ಅವರು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಅವರು ಮಾತನಾಡಿ ಮತದಾರರ ಚೀಟಿ ಹೊಂದಿರುವ ಪ್ರತಿಯೊಬ್ಬರೂ ಮತದಾನ ಮಾಡಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಆದ್ದರಿಂದ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.