ಮಡಿಕೇರಿ, ಏ. 14: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ತಾ. 17 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಅಲ್ಪಸಂಖ್ಯಾತ ಘಟಕ ಜಿಲ್ಲಾಧ್ಯಕ್ಷ ಇಸಾಕ್ಖಾನ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಅವರು ತಾ. 17 ರಂದು ಜಿಲ್ಲೆಗೆ ಭೇಟಿ ನೀಡಿ, ಕುಮಾರ ಪರ್ವ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಆಗಮಿಸಿ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕುಶಾಲನಗರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಪಕ್ಷದ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಆಲಿ ಮಾತನಾಡಿ, ಕುಶಾಲನಗರದ ಕುಮಾರಪರ್ವ ಕಾರ್ಯಕ್ರಮದ ಸಂದರ್ಭ ಕೊಪ್ಪ ಗೇಟ್ನಿಂದ ಸಮಾವೇಶ ನಡೆಯುವ ತಾವರೆಕೆರೆ ಮೈದಾನದವರೆಗೆ ಮೆರವÀಣಿಗೆ ನಡೆಯಲಿದೆಯೆಂದು ತಿಳಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಸಮಾಜ ಒಡೆಯುವ ಮೂಲಕ ಆಡಳಿತ ನಡೆಸಿದೆ ಎಂದು ಆರೋಪಿಸಿರುವ ಇಸಾಕ್ ಖಾನ್ ಪ್ರಾದೇಶಿಕ ಪಕ್ಷ ಜಾತ್ಯತೀತ ಜನತಾದಳದಿಂದ ಮಾತ್ರ ಆಡಳಿತವನ್ನು ನೀಡಲು ಸಾಧ್ಯವೆಂದು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ವೈಫಲ್ಯವನ್ನು ಕಂಡಿದೆ ಎಂದು ಟೀಕಿಸಿದರು. ಕಾಶ್ಮೀರದಲ್ಲಿ ಹೆಣ್ಣು ಮಗಳ ಮೇಲೆ ನಡೆದಿರುವ ದೌರ್ಜನ್ಯವನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಜನರ ಹಿತಕ್ಕಾಗಿ ಕಾರ್ಯ ನಿರ್ವಹಿಸಲು ಪ್ರಾದೇಶಿಕ ಪಕ್ಷ ಜೆಡಿಎಸ್ಗೆ ಮಾತ್ರ ಸಾಧ್ಯವೆಂದು ಅಭಿಪ್ರಾಯಪಟ್ಟರು.
ನಾಳೆ ಪ್ರತಿಭಟನೆ: ಜೆಡಿಎಸ್ ಅಲ್ಪಸಂಖ್ಯಾತರ ಘಟಕದಿಂದ ತಾ. 16 ರಂದು ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ‘ಬಿಜೆಪಿ ಹಠಾವೋ- ಭೇಟಿ ಬಚಾವೋ’ ಎನ್ನುವ ಪ್ರತಿಭಟನೆ ಯನ್ನು ಹಮ್ಮಿಕೊಂಡಿರುವದಾಗಿ ಇಸಾಕ್ ಖಾನ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಪ್ರಮುಖರಾದ ಮುಸ್ತಫ, ರಶೀದ್, ಇಬ್ರಾಹಿಂ, ಅಜೀಜ್ ಉಪಸ್ಥಿತರಿದ್ದರು.