ಮಡಿಕೇರಿ, ಏ. 19 : ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದೇ ಪ್ರಥಮ ಬಾರಿಗೆ ತಾ. 27ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಕೆ.ಪಿ.ಸಿ.ಸಿ. ಹಿರಿಯ ಉಪಾಧ್ಯಕ್ಷ ಮಿಟ್ಟು ಚಂಗಪ್ಪ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು ಇದೇ ತಾ.27 ರಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಗೋಣಿಕೊಪ್ಪಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಅವರು, ಚುನಾವಣಾ ಪ್ರಚಾರ ನಿಮಿತ್ತ ಗೋಣಿಕೊಪ್ಪಲಿನ ದಸರಾ ಮೈದಾನದಲ್ಲಿ ಬಹಿರಂಗ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಎ.ಐ.ಸಿ.ಸಿ ಕಾರ್ಯದರ್ಶಿ ವಿಷ್ಣುನಾಥನ್, ರಾಜ್ಯಸಭಾ ಸದಸ್ಯ ಚಂದ್ರಶೇಖರ್, ರಾಹುಲ್ ಗಾಂಧಿ ಆಪ್ತವಲಯದ ಬಿಜೊಯ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವುಮಾದಪ್ಪ ಅವರೊಂದಿಗೆ ನಿನ್ನೆ ಸ್ಥಳ ಪರಿಶೀಲನೆ ನಡೆಸಿದ್ದು, ರಾಹುಲ್ ಗಾಂಧಿ ಅವರ ಭೇಟಿ ಜಿಲ್ಲಾ ಕಾಂಗ್ರೆಸ್‍ನಲ್ಲಿ ಸಂಚಲನ ಮೂಡಿಸಲಿದೆ. ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸೇರಿದಂತೆ ರಾಷ್ಟ್ರ ಮತ್ತು ರಾಜ್ಯಮಟ್ಟದ ಇತರ ನಾಯಕರುಗಳು ಭಾಗವಹಿಸಲಿದ್ದಾರೆ.ಕಾರ್ಯಕ್ರಮಕ್ಕೆ ಸುಮಾರು ಇಪ್ಪತ್ತು ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ಮಿಟ್ಟುಚಂಗಪ್ಪ ತಿಳಿಸಿದ್ದಾರೆ.ಕೆಪಿಸಿಸಿ ಉಸ್ತುವಾರಿ ವೆಂಕಟಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಧರ್ಮಜಾ ಉತ್ತಪ್ಪ, ಅಬ್ದುಲ್ ಸಲಾಂ, ಅಪ್ರು ರವೀಂದ್ರ, ವಕ್ತಾರ ಟಾಟು ಮೊಣ್ಣಪ್ಪ, ಹಿಂದುಳಿದ ವರ್ಗದ ಅಧ್ಯಕ್ಷ ಸರ ಚಂಗಪ್ಪ, ರಾಜೀವ್ ಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನಾ, ನಗರ ಕಾಂಗ್ರೆಸ್ ಅಧ್ಯಕ್ಷ ಅರವಿಂದ್ ಕುಟ್ಟಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಸ್ಥಳ ಪರಿಶೀಲನೆ ಸಂದರ್ಭ ಹಾಜರಿದ್ದರು.