ಮಡಿಕೇರಿ, ಏ. 24: ಕಾಶ್ಮೀರದ ಕಥುವಾದಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಅತ್ಯಂತ ಖಂಡನೀಯವೆಂದು ತಿಳಿಸಿರುವ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದೆ.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಅಪ್ರು ಅವರ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಸಭೆಯಲ್ಲಿ ಘಟನೆಯನ್ನು ಖಂಡಿಸಲಾಯಿತು. ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಅಭದ್ರತೆ ಕಾಡುತ್ತಿದ್ದು, ಭಯದ ವಾತಾವರಣ ಮೂಡಿದೆ ಎಂದು ಸಭೆಯನ್ನುದ್ದೇಶಿಸಿ ಮಾತನಾಡಿದ ರವೀಂದ್ರ ಅಪ್ರು ಅಭಿಪ್ರಾಯಪಟ್ಟರು. ಈ ರೀತಿಯ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. ತನಿಖೆಯ ಹಾದಿ ತಪ್ಪಿಸುವ ಪ್ರಯತ್ನಗಳು ನಡೆದರೆ ಪಕ್ಷದ ವತಿಯಿಂದ ತೀವ್ರ ರೀತಿಯ ಹೋರಾಟವನ್ನು ಹಮ್ಮಿಕೊಳ್ಳುವದಾಗಿ ತಿಳಿಸಿದರು. ಸಭೆಯಲ್ಲಿ ಉಪಾಧ್ಯಕ್ಷರಾದ ಮೋಹನ್, ಇಬ್ರಾಹಿಂ, ಭಾಷಾ, ಹಂಸ, ತಂಗಚ್ಚನ್, ವಿಕಾಸ್ ಅಚ್ಚಯ್ಯ, ಉತ್ತಯ್ಯ, ಪ್ರಧಾನ ಕಾರ್ಯದರ್ಶಿ ಜಾನ್ಸನ್ ಪಿಂಟೋ, ಎ.ಬಿ. ಗಣೇಶ್, ಕಾನೂನು ಸಲಹೆಗಾರರಾದ ಎನ್.ಜಿ. ಅಯ್ಯಪ್ಪ, ಖಜಾಂಚಿ ಕುಶಾಲಪ್ಪ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.