ಶ್ರೀಮಂಗಲ, ಏ. 26: ರಾಹುಲ್ ಗಾಂಧಿಯವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ನಂತರ ಪ್ರಪ್ರಥಮ ಬಾರಿಗೆ ಕೊಡಗು ಜಿಲ್ಲೆಯ ಗೋಣಿಕೊಪ್ಪಲಿಗೆ ತಾ. 27 ರಂದು (ಇಂದು) ಭೇಟಿ ನೀಡಲಿದ್ದು, ವೀರಾಜಪೇಟೆ ಕ್ಷೇತ್ರದ ಪಕ್ಷದ ಅಭ್ಯರ್ಥಿ ಚೆಪ್ಪುಡೀರ ಅರುಣ್ ಮಾಚಯ್ಯ ಹಾಗೂ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಕೆ.ಪಿ. ಚಂದ್ರಕಲಾ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಅಪಟ್ಟೀರ ಟಾಟು ಮೊಣ್ಣಪ್ಪ ತಿಳಿಸಿದ್ದಾರೆ.ಗೋಣಿಕೊಪ್ಪದ ಪಕ್ಷದ ಮುಖಂಡರು ಈ ಬಗ್ಗೆ ಉಸ್ತುವಾರಿ ವ್ಯವಸ್ಥೆಯ ಬಗ್ಗೆ ನಡೆಸಿದ ಸಭೆಯಲ್ಲಿ ಮಾಹಿತಿ ನೀಡಿದರು. ಧರ್ಮಸ್ಥಳದಿಂದ ವಿಶೇಷ ಪೂಜೆ ಸಲ್ಲಿಸಿ, ಹೆಲಿಕಾಪ್ಟರ್ ಮೂಲಕ ಗೋಣಿಕೊಪ್ಪ ಫ್ರೌಡಶಾಲಾ ಮೈದಾನಕ್ಕೆ ಆಗಮಿಸಿ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ ಮುಖ್ಯ ಮಂತ್ರಿ ಸಿದ್ಧರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನೊಂದು ವಿಶೇಷ ಹೆಲಿಕಾಪ್ಟರ್ ಮೂಲಕ ಹಾತೂರು ಪ್ರಾಥಮಿಕ ಶಾಲಾ ಮೈದಾನಕ್ಕೆ ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಪಕ್ಷದ ಮುಖಂಡರಾದ ಡಿ.ಕೆ. ಶಿವುಕುಮಾರ್, ಕೊಡಗು ಜಿಲ್ಲಾ ಎ.ಐ.ಸಿ.ಸಿ ಯ ಉಸ್ತುವಾರಿ ವಿಷ್ಣುನಾಥನ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದ್ದಾರೆ.
ಇದಕ್ಕೂ ಮೊದಲು ಗೋಣಿಕೊಪ್ಪ ಬೈಪಾಸ್ ರಸ್ತೆಯಿಂದ ಮಧ್ಯಾಹ್ನ 2 ಗಂಟೆಗೆ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆಯ ಮೂಲಕ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾಗಿ ಸಮಾವೇಶ ನಡೆಯಲಿರುವ ಶಾಲಾ ಮೈದಾನಕ್ಕೆ ತೆರಳಲಿದ್ದಾರೆ ಎಂದು ಮೊಣ್ಣಪ್ಪ ತಿಳಿಸಿದರು.
ಮಧ್ಯಾಹ್ನ 3 ಗಂಟೆ 10 ನಿಮಿಷಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸುವ ರಾಹುಲ್ ಗಾಂಧಿಯವರು ಕಾವೇರಿ ಕಾಲೇಜು ಆವರಣದಲ್ಲಿರುವ ವೀರ ಸೇನಾನಿಗಳಾದ ಪೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಕೊಡಗಿನ ಜ್ವಲಂತ ಸಮಸ್ಯೆ, ಕಾರ್ಮಿಕರು, ರೈತರು, ವರ್ತಕರು, ಬುಡಕಟ್ಟು ಜನಾಂಗ, ಆದಿವಾಸಿಗಳು, ಸೇರಿದಂತೆ ಎಲ್ಲಾ ವರ್ಗದ ಜನರ ಸಮಸ್ಯೆಗಳ ಬಗ್ಗೆ ಮನವಿ ಪತ್ರ ಸಲ್ಲಿಸಲಾಗುವದು. ಇದರೊಂದಿಗೆ ವಿಯೆಟ್ನಾಮ್‍ನಿಂದ ಕರಿಮೆಣಸು ಆಮದಾಗುತ್ತಿರುವ ದರಿಂದ ಶೇ. 50 ರಷ್ಟು ಬೆಲೆ ಕುಸಿತ ಉಂಟಾಗಿ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ರಾಹುಲ್ ಗಾಂಧಿಯವರ ಗಮನ ಸೆಳೆದು ಈ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿ ಕೇಂದ್ರ ಸರ್ಕಾರದಿಂದ ಸೂಕ್ತ ಪರಿಹಾರ ಕ್ರಮಕೈಗೊಳ್ಳಲು ಬೆಳೆಗಾರರ ಪರವಾಗಿ ಮನವಿ ಸಲ್ಲಿಸಲಾಗುವದೆಂದು ಹೇಳಿದರು.
ಸಭೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಬೂತ್ ಸಮಿತಿ ಅಧ್ಯಕ್ಷÀ ಕೊಲ್ಲೀರ ಬೋಪಣ್ಣ, ವೀರಾಜಪೇಟೆ ಕ್ಷೇತ್ರ ಪ್ರಚಾರ ಸಮಿತಿಯ ಅಧ್ಯಕ್ಷ ಮತ್ರಂಡ ದಿಲ್ಲು, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆÀ ಕಡೇಮಾಡ ಕುಸುಮಾ ಜೋಯಪ್ಪ, ಪೊನ್ನಂಪೇಟೆ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಎಂ. ಅಬ್ದುಲ್ ರೆಹಮಾನ್ (ಬಾಪು), ಡಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಜೆ. ವಿನಯ್ ಕುಮಾರ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಸಾಜಿ ಅಚ್ಚುತ್ತನ್, ಗೋಣಿಕೊಪ್ಪ ಆರ್.ಎಂ.ಸಿ. ಸದಸ್ಯ ಅಜ್ಜಿಕುಟ್ಟೀರ ನರೇನ್ ಕಾರ್ಯಪ್ಪ, ಕಾಂಗ್ರೆಸ್ ಮುಖಂಡ ಸಿ.ಎ. ಬೋಪಯ್ಯ ಹಾಜರಿದ್ದರು.