ಮಡಿಕೇರಿ, ಏ. 29: ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ವಿಭಾಗದ ಪದಾಧಿಕಾರಿಗಳು ಮತ್ತು ಸದಸ್ಯರಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ.ಇಂದು ಕುಶಾಲನಗರದ ರೆಸಾರ್ಟ್‍ವೊಂದರಲ್ಲಿ ನಡೆದ ಸಭೆಯೊಂದರಲ್ಲಿ ಕೆಲವು ಪ್ರಮುಖರು ತಮ್ಮ ಅಸಮಾಧಾನ ಹೊರಗೆಡವಿದ್ದಾರೆ. ಪ್ರಸ್ತುತ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವ ಬಗ್ಗೆ ಗೊಂದಲ ಉಂಟಾಗಿದೆ ಎನ್ನುವ ಅಭಿಪ್ರಾಯ ಮೂಡಿಬಂದಿತು. ಅಲ್ಪಸಂಖ್ಯಾತ ಜಿಲ್ಲಾ ಘಟಕದ ಅಧ್ಯಕ್ಷ ಇಸಾಕ್ ಮಾತನಾಡಿ, ಜೆಡಿಎಸ್ ಪಕ್ಷದ ಜಿಲ್ಲೆಯ ಅಭ್ಯರ್ಥಿಗಳು ಹಾಗೂ ಪ್ರಮುಖರು ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿದ್ದಾರೆ ಎಂದು ಟೀಕಿಸಿದರು. ಈಗಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತ ವಿಭಾಗದ ಪ್ರಮುಖರನ್ನು ಮುಖ್ಯ ವಾಹಿನಿಯಲ್ಲಿ ಸೇರ್ಪಡೆಗೊಳಿಸದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ರೀತಿ ಮುಂದುವರಿದರೆ ಅಲ್ಪಸಂಖ್ಯಾತರು ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳುವ ಅನಿವಾರ್ಯತೆ ಎದುರಾಗ ಬಹುದೆಂದು ಸಭೆಯಲ್ಲಿದ್ದ ಕೆಲವು ಪ್ರಮುಖರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಮುಖ್ಯವಾಗಿ ಜೆಡಿಎಸ್ ಅಲ್ಪಸಂಖ್ಯಾತ ರಾಜ್ಯ ಘಟಕದ ಕಾರ್ಯದರ್ಶಿ ಷರೀಫ್, ಜಿಲ್ಲಾ ವಿಭಾಗದ ಮಾಜಿ ಅಧ್ಯಕ್ಷ ಮನ್ಸೂರ್, ವೀರಾಜಪೇಟೆ ಪ್ರಮುಖರಾದ ಮತೀನ್ ಮತ್ತಿತರರು ಉಪಸ್ಥಿತರಿದ್ದರು.