ಸೋಮವಾರಪೇಟೆ, ಏ. 30: ಜಾತ್ಯತೀತ ಜನತಾದಳ ಪಕ್ಷದಲ್ಲಿ ಮಾತ್ರ ಅಲ್ಪಸಂಖ್ಯಾತರಿಗೆ ಹೆಚ್ಚಿನ ಸ್ಥಾನಮಾನ ಲಭಿಸಲು ಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲೆಯ ಶೇ. 80 ರಷ್ಟು ಅಲ್ಪಸಂಖ್ಯಾತರು ಜೆಡಿಎಸ್ ಬಗ್ಗೆ ಒಲವು ಹೊಂದಿದ್ದಾರೆ ಎಂದು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಅಭಿಪ್ರಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎರಡು ವಿಧಾನ ಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇಡಿ ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಮಾನ್ಯತೆ ನೀಡಿರುವ ಪಕ್ಷ ಜಾತ್ಯಾತೀತ ಜನತಾದಳ. ಜೆಡಿಎಸ್ನಲ್ಲಿ ಬೆಳೆದ ನಾಯಕರು ಈಗ ಕಾಂಗ್ರೆಸ್ನಲ್ಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಸೋತು ಸುಣ್ಣವಾಗಿದೆ. ಈ ಹಿಂದೆ ಅಲ್ಪಸಂಖ್ಯಾತರು ಕಮಲ ಕಾಂಗ್ರೆಸ್ಸಿಗರಿಗೆ ಮತ ಹಾಕಿದ ಪರಿಣಾಮ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ಗೆ ಜೆಡಿಎಸ್ನ ಭಯ ಪ್ರಾರಂಭವಾಗಿದೆ ಎಂದು ಅಭಿಪ್ರಾಯಿಸಿದರು.
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಅಭಿವೃದ್ಧಿಯಾಗಿಲ್ಲ. ಕುಮಾರಸ್ವಾಮಿ ಅವರು ಅಲ್ಪಸಂಖ್ಯಾತರಿಗೆ ವಿಶೇಷ ಪ್ಯಾಕೇಜ್ ತಯಾರಿಸಿದ್ದಾರೆ. ಕಳೆದ 20 ತಿಂಗಳ ಆಡಳಿತದ ಬಗ್ಗೆ ಜನತೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತರಿಗೆ ಬೆಲೆ ಇಲ್ಲದಂತಾಗಿದೆ ಎಂದ ಇಸಾಕ್ ಖಾನ್, ಜೆಡಿಎಸ್ ಅಲ್ಪಸಂಖ್ಯಾತ ಘಟಕದಲ್ಲಿ ಯಾವದೇ ಗೊಂದಲವಿಲ್ಲ. ಅಲ್ಪಸಂಖ್ಯಾತರಲ್ಲಿ ಗೊಂದಲ ಮೂಡಿಸಲು ಕಾಂಗ್ರೆಸ್ನ ಕೆಲವರು ಮುಂದಾಗಿದ್ದು, ಮಾಧ್ಯಮಗಳಿಗೆ ತಪ್ಪು ಹೇಳಿಕೆಗಳನ್ನು ರವಾನಿಸಿದ್ದಾರೆ. ನಾವುಗಳು ಜೆಡಿಎಸ್ನಲ್ಲೇ ಇದ್ದೇವೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದರು.
ಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಷರೀಫ್, ಸಂಘಟನಾ ಕಾರ್ಯದರ್ಶಿ ಮನ್ಸೂರ್, ವೀರಾಜಪೇಟೆ ಕ್ಷೇತ್ರ ಸಮಿತಿ ಅಧ್ಯಕ್ಷ ರಶೀದ್, ಪ್ರಮುಖರಾದ ಕೆ.ಇ. ಕರೀಂ, ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ರಫೀಕ್ ಉಪಸ್ಥಿತರಿದ್ದರು.