ಮಡಿಕೇರಿ, ಮೇ 6: ವಿಧಾನಸಭಾ ಚುನಾವಣೆಯ ಮತದಾನ ತಾ. 12 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ. ವಿಧಾನಸಭಾ ಚುನಾವಣೆ ಸಂಬಂಧ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಆ ನಿಟ್ಟಿನಲ್ಲಿ ಮನೆ ಮನೆಗೆ ಭೇಟಿ ನೀಡಿ ಕಡ್ಡಾಯವಾಗಿ ಮತದಾನ ಮಾಡಿ ಎಂಬ ಮಾಹಿತಿ ನೀಡುವ ಕಾರ್ಯಕ್ರಮ ಆರಂಭವಾಗಿದೆ.

ಮನೆ ಮನೆಗೆ ಭೇಟಿ ನೀಡಿ ಕಡ್ಡಾಯವಾಗಿ ಮತದಾನ ಮಾಡಿ, ಪ್ರಜಾಪ್ರಭುತ್ವ ಬಲಪಡಿಸಿ ಎಂಬ ಸಂದೇಶ ಹೇಳುವದರ ಜೊತೆಗೆ, ಚುನಾವಣಾ ಆಯೋಗ ಒದಗಿಸಿರುವ ಭಿತ್ತಿಪತ್ರಗಳನ್ನು ಮನೆಯ ಮುಂದೆ ಅಂಟಿಸಿ ಮಾಹಿತಿ ನೀಡಲಾಗುತ್ತಿದೆ.

ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆ ಸಂದರ್ಭ ಜಿಲ್ಲೆಯ ಯಾವ ಪ್ರದೇಶಗಳಲ್ಲಿ ಮತ್ತು ಮತಗಟ್ಟೆಗಳಲ್ಲಿ ಕಡಿಮೆ ಮತದಾನವಾಗಿದೆ ಎಂಬದನ್ನು ಗಮನಿಸಿ, ಅಂತಹ ಕಡೆಗಳಲ್ಲಿ ಮತದಾರರಿಗೆ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ.

ಮಡಿಕೇರಿ ನಗರಸಭೆ ವ್ಯಾಪ್ತಿ ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ಮತದಾನದ ಮಹತ್ವ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿದೆ. ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಳವಾಗುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷ ಪ್ರಶಾಂತ್ ಕುಮಾರ್ ಮಿಶ್ರ ತಿಳಿಸಿದ್ದಾರೆ.