ಸೋಮವಾರಪೇಟೆ, ಮೇ 7: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆಮಾಡು ವದು ಅನಿವಾರ್ಯ. ಕೊಡಗಿನಲ್ಲಿ ಕಾಂಗ್ರೆಸ್ ಗೆದ್ದರಷ್ಟೇ ಅಭಿವೃದ್ಧಿ ಸಾಧ್ಯ ಎಂದು ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಕೆ.ಪಿ.ಚಂದ್ರಕಲಾ ಹೇಳಿದರು.
ಇಲ್ಲಿನ ಜೇಸಿ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗಲೂ ಕೊಡಗಿನಲ್ಲಿ ಪ್ರತಿನಿಧಿಗಳಿಲ್ಲದೇ ಅಭಿವೃದ್ಧಿಯಲ್ಲಿ ಹಿನ್ನಡೆ ಕಾಣುವಂತಾಗಿದೆ ಎಂದರು.
ಕಳೆದ 30 ವರ್ಷಗಳಿಂದ ಕುಟುಂಬವನ್ನು ಮರೆತು ಪಕ್ಷಕ್ಕಾಗಿ ದುಡಿದಿದ್ದೇನೆ. ಜಿಲ್ಲಾ ಪಂಚಾಯಿತಿಗೆ ಮೂರು ಅವಧಿಯಲ್ಲಿ ಸದಸ್ಯಳಾಗಿ, ಕರ್ನಾಟಕ ಒಳಚರಂಡಿ ಮತ್ತು ನಗರ ನೀರು ಸರಬರಾಜು ಮಂಡಳಿಯ ಅಧ್ಯಕ್ಷೆಯಾಗಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯನ್ನು ಪ್ರಾಮಾಣಿಕ ವಾಗಿ ಪರಿಹರಿಸುವದ ರೊಂದಿಗೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದೇನೆ. ಈ ಹಿನ್ನೆಲೆಯಲ್ಲಿ ಜನತೆ ಈ ಬಾರಿ ಆಶೀರ್ವದಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಪಕ್ಷದ ಜಿಲ್ಲಾ ಉಸ್ತುವಾರಿ ವೆಂಕಪ್ಪಗೌಡ ಮಾತನಾಡಿ, ಮೋದಿ ಸರ್ಕಾರ ಜನತೆಯ ಆಶೋತ್ತರ ಈಡೇರಿಸುವಲ್ಲಿ ವಿಫಲವಾಗಿದೆ. 15 ಲಕ್ಷ ಹಣ ಖಾತೆಗೆ ಜಮೆ ಮಾಡುವದಾಗಿ ಹೇಳಿ ಇದೀಗ ನುಣುಚಿಕೊಂಡಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ 1ಲಕ್ಷ ರೂ. ಸಾಲವನ್ನು ಮನ್ನಾ ಮಾಡುತ್ತೇನೆ ಎಂದು ಪೊಳ್ಳು ಭರವಸೆ ನೀಡುತ್ತಿದ್ದಾರೆ. ಕುಮಾರಸ್ವಾಮಿ ಕೇವಲ 24ಗಂಟೆಯೊಳಗೆ ಸಾಲ ಮನ್ನಾ ಮಾಡುತ್ತೇವೆ ಎಂಬ ಸುಳ್ಳು ಹೇಳುತ್ತಿದ್ದು, 25 ಸ್ಥಾನಗಳಲ್ಲಿ ಗೆಲ್ಲಲಷ್ಟೇ ಶಕ್ತವಾಗಿರುವ ಜೆಡಿಎಸ್ ಸಾಲ ಮನ್ನಾ ಮಾಡುತ್ತದೆಯೇ ಎಂದು ವ್ಯಂಗ್ಯವಾಡಿದರು.
ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಇದೆಯೇ ಹೊರತು ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಲ್ಪಸಂಖ್ಯಾತ ಮತದಾರರು ಕಾಂಗ್ರೆಸ್ ಪರವಾಗಿದ್ದಾರೆ ಎಂದರು.
ಹಿರಿಯ ವಕೀಲ ಎಚ್.ಎಸ್. ಚಂದ್ರಮೌಳಿ ಮಾತನಾಡಿ, ಕೊಡಗಿನಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಇರುವ ಬಿಜೆಪಿಯ ಪಾರ್ಥೇನಿಯಂ ಕಳೆಯನ್ನು ಕೀಳಬೇಕಾದ ಸಂಕಲ್ಪವನ್ನು ಕಾರ್ಯಕರ್ತರು ಮಾಡಬೇಕಾಗಿದೆ. ತಾನು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂದರು.
ಎನ್‍ಎಸ್‍ಯುಐ ಕೇರಳ ಘಟಕದ ಅಧ್ಯಕ್ಷ ಅಬ್ದುಲ್ ರಶೀದ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಕ್ರಮಗಳೇ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣವಾಗುವ ಮೂಲಕ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಗಳಾಗಲಿದ್ದಾರೆ. ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ, ಶೋಷಿತರ ಅಭಿವೃದ್ಧಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕಳೆದ ಚುನಾವಣೆಯಲ್ಲೇ 75 ವರ್ಷ ಎಂದು ನಮೂದಿಸಿದ ಜೀವಿಜಯ ಈ ಬಾರಿ 78 ವರ್ಷ ಎಂದಿದ್ದಾರೆ. ಜೀವಿಜಯ ಅವರು ಚುನಾವಣೆ ಸಂದರ್ಭ ಮಾತ್ರ ಹೊರಬರುತ್ತಾರೆ. ಚುನಾವಣಾ ಜಾತ್ರೆಯಲ್ಲಿ ಅಂಗಡಿ ತೆರೆದು ವ್ಯಾಪಾರ ಮುಗಿಸಿದ ನಂತರ ಮುಂದಿನ ಚುನಾವಣೆವರೆಗೂ ಅವರ ಅಂಗಡಿ ಮುಚ್ಚಿರುತ್ತದೆ ಎಂದು ವ್ಯಂಗ್ಯವಾಡಿದರು.
ಮೋದಿಯ ಅಶ್ವಮೇಧ ಕುದುರೆಯನ್ನು ರಾಜ್ಯದಲ್ಲಿ ಸಿದ್ದರಾಮಯ್ಯ ಕಟ್ಟಿಹಾಕುವ ಕೆಲಸ ಮಾಡುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ.
ವೇದಿಕೆಯಲ್ಲಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಎಐಸಿಸಿ ಸದಸ್ಯೆ ತಾರಾ ಅಯ್ಯಮ್ಮ, ಮಾಜಿ ಸಚಿವೆ ಸುಮಾವಸಂತ್, ಹಿರಿಯರಾದ ಮಿಟ್ಟು ಚಂಗಪ್ಪ ಮಡಿಕೇರಿ ಬ್ಲಾಕ್ ಅಧ್ಯಕ್ಷ ಅಫ್ರು ರವೀಂದ್ರ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಕೆ.ಎಂ.ಲೋಕೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ, ಪ್ರಮುಖರಾದ ನಟೇಶ್ ಗೌಡ, ವಿರೂಪಾಕ್ಷಪ್ಪ, ನಾಪಂಡ ಮುತ್ತಪ್ಪ ಮತ್ತಿತರರು ಉಪಸ್ಥಿತರಿದ್ದರು.