ಮಡಿಕೇರಿ, ಮೇ 17: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಹಾಗೂ ಇದ್ದಿಲು ತುಂಬಿಕೊಂಡು ಮಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಲಾರಿಯ ನಡುವೆ ಬೋಯಿಕೇರಿಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಂಟೈನರ್ ಚಾಲಕ ಪ್ರಸಾದ್ ಎಂಬವರ ಕಾಲು ಮುರಿದಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕ ವೀರಾರೆಡ್ಡಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇಂದು ಮುಂಜಾನೆ 5 ಗಂಟೆ ವೇಳೆಗೆ ಘಟನೆ ನಡೆದಿದ್ದು, ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.