ಮಡಿಕೇರಿ, ಮೇ 31: ನಾಪೋಕ್ಲು ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಇರುವದನ್ನು ಗಮನಿಸಿ ತುರ್ತಾಗಿ ಪರ್ಯಾಯ ವ್ಯವಸ್ಥೆ ಮಾಡುವಂತೆ ಗ್ರಾ.ಪಂ. ಪಿಡಿಓಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ನಿರ್ದೇಶನ ನೀಡಿದ್ದಾರೆ. ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಜತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದರೂ, ನಾನಾ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಮತ್ತಿತರ ಕಾರಣಗಳಿಂದ ಕುಡಿಯುವ ನೀರು ಪೂರೈಕೆಯಲ್ಲಿ ತೊಂದರೆಯಾಗುತ್ತಿದೆ ಎಂಬದು ಕೇಳಿಬರುತ್ತಿದ್ದು, ಸಮಸ್ಯೆ ಇರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕವಾದರೂ ಕುಡಿಯುವ ನೀರು ಸರಬರಾಜು ಮಾಡುವಂತೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಸಿ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ರಕ್ಷಕರನ್ನು ನಿಯೋಜಿಸಬೇಕು. ಜೊತೆಗೆ ಸಿಸಿ ಕ್ಯಾಮರಾ ಅಳವಡಿಬೇಕು. ತಮ್ಮ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು. ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು. ಗ್ರಾ.ಪಂ. ವ್ಯಾಪ್ತಿಯ ಪ್ರವಾಸಿ ಕೇಂದ್ರಗಳಲ್ಲಿ ವಾಹನ ನಿಲುಗಡೆ ಶುಲ್ಕವನ್ನು ಸಂಗ್ರಹಿಸಲಾಗುತ್ತಿದ್ದು, ಆ ನಿಟ್ಟಿನಲ್ಲಿ ಪ್ರವಾಸಿ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತಿತರ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕಿದೆ ಎಂದು ನಿರ್ದೇಶನ ನೀಡಿದರು.
ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಎನ್‍ಒಸಿ ನೀಡುವಾಗ ಪರಿಸರ ಸಂಬಂಧ ಷರತ್ತುಗಳನ್ನು ವಿಧಿಸಬೇಕು ಗ್ರಾಮಸಭೆ ಆಹ್ವಾನಿಸಿ ಪರಿಸರದ ಮಹತ್ವ ಬಗ್ಗೆ ಮನವರಿಕೆ ಮಾಡಬೇಕು. ಜಿಲ್ಲೆಯ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ರತಿ ವಾರ ಸ್ವಚ್ಛತಾ ದಿನ ಆಚರಣೆ ಮಾಡಬೇಕು ಎಂದು ಸಲಹೆ ಮಾಡಿದರು. ಈಗಾಗಲೇ ಮುಂಗಾರು ಆರಂಭವಾಗಿದ್ದು, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಿ.ಪಂ. ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ, ಉಪ ಕಾರ್ಯದರ್ಶಿ ಬಾಬು, ತಾ.ಪಂ. ಇಓಗಳಾದ ಲಕ್ಷ್ಮಿ, ಚಿಟ್ಟಿಯಪ್ಪ, ಜಯಣ್ಣ, ಸ್ವಚ್ಛ ಭಾರತ್ ಅಭಿಯಾನದ ಸಮಾಲೋಚಕ ಸೂರಜ್, ಪೆಮ್ಮಯ್ಯ, ವಾಸುದೇವ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಇತರರು ಇದ್ದರು.