ಚೆಟ್ಟಳ್ಳಿ, ಜೂ. 13: ಚೆಟ್ಟಳ್ಳಿ ಪಂಚಾಯಿತಿ ವ್ಯಾಪ್ತಿಯ ಈರಳೆವಳಮುಡಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಭಾರೀ ಮಳೆಯಿಂದ ವಿದ್ಯುತ್ ಕಂಬಗಳು ಉರುಳಿ ಸಂಪರ್ಕ ಕಡಿತಗೊಂಡಿದ್ದು, ಗ್ರಾಮದ ಜನರಿಗೆ ನೀರಿಲ್ಲದೆ ಪರದಾಡುತ್ತಿರುವ ಪರಿಸ್ಥಿತಿಯಾಗಿದೆ. ಗ್ರಾಮ ಪಂಚಾಯಿತಿ ಸದಸ್ಯ ಬಲ್ಲಾರಂಡ ಕಂಠಿ ಕಾರ್ಯಪ್ಪ ಅವರು ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯ ಪಿಡಿಓ ಹಾಗೂ ಅಧ್ಯಕ್ಷರನ್ನು ಸಂಪರ್ಕಿಸಿ ನೀರಿನ ವ್ಯವಸ್ಥೆಗೆ ತಾತ್ಕಾಲಿಕವಾಗಿ ಜನರೇಟರನ್ನು ಒದಗಿಸಿಕೊಡುವಂತೆ ಮನವಿ ಮಾಡಿಕೊಂಡ ಮೇರೆಗೆ ಜನರೇಟರನ್ನು ತಂದು ಮೋಟಾರನ್ನು ಓಡಿಸುವ ಮೂಲಕ ಗ್ರಾಮಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಲಾಯಿತು.

ವಿದ್ಯುತ್ ಇಲಾಖೆಗೆ ಹಲವು ಬಾರಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಿ ಎಂದು ಮನವಿ ಮಾಡಿದರೂ ಈವರೆಗೂ ಗಮನಿಸಿದ ಬಗ್ಗೆ ಕಂಠಿ ಕಾರ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದು, ಶೀಘ್ರದಲ್ಲೇ ವ್ಯವಸ್ಥೆಯನ್ನು ಸರಿಪಡಿಸಿಕೊಡುವಂತೆ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಬಲ್ಲಾರಂಡ ದೇವಿದೇವಯ್ಯ ಹಾಗೂ ಕೊಕ್ಕೆರ ದೊರೆ ಹಾಜರಿದ್ದರು.