ಮಡಿಕೇರಿ, ಜೂ. 18: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಜುಲೈ 29 ರಂದು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲು ನಿರ್ಧರಿಸಲಾಗಿದ್ದು, ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸ ಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಕುಡೆಕಲ್ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ನಾತಕೋತ್ತರ, ವೃತ್ತಿಪರ ಪದವಿಯಲ್ಲಿ ಶೇ. 75 ಕ್ಕಿಂತ ಹೆಚ್ಚು, ಪದವಿಯಲ್ಲಿ ಶೇ. 80 ಕ್ಕಿಂತ ಹೆಚ್ಚು, ಪಿಯುಸಿಯಲ್ಲಿ ಶೇ. 85 ಕ್ಕಿಂತ ಹೆಚ್ಚು, 1ನೇ ತರಗತಿಯಿಂದ 10ನೇ ತರಗತಿವರೆಗೆ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಗುತ್ತದೆ. ಪತ್ರಿಕಾ ದಿನಾಚರಣೆ ಕಾರ್ಯಕ್ರಮ ದಲ್ಲಿ ಖುದ್ದು ಹಾಜರಿರಲು ಸಾಧ್ಯವಿರುವ ಮಕ್ಕಳನ್ನು ಮಾತ್ರ ಸನ್ಮಾನಿಸಲಾಗುತ್ತದೆ.ಸಂಘದ ಸದಸ್ಯರು ತಮ್ಮ ಗುರುತಿನ ಚೀಟಿಯ ನಕಲು, ಮಕ್ಕಳ ಅಂಕ ಪಟ್ಟಿಯ ನಕಲು ಸಹಿತ ತಾ. 23 ರೊಳಗೆ ಸಂಘದ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 8884432052 ಅನ್ನು ಸಂಪರ್ಕಿಸಬಹುದು.

ಮಹಾಸಭೆ: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ 22 ರಂದು ಪತ್ರಿಕಾ ಭವನದಲ್ಲಿ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಹೈಕೋರ್ಟ್ ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಖಜಾಂಚಿ ಸವಿತಾ ರೈ, ರಾಷ್ಟ್ರೀಯ ಸಮಿತಿ ಸದಸ್ಯ ಬಿ.ಎಸ್. ಲೋಕೇಶ್ ಸಾಗರ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಕುಪ್ಪಂಡ ದತ್ತಾತ್ರಿ ಮತ್ತಿತರರು ಇದ್ದರು.