ಕುಶಾಲನಗರ, ಜೂ. 20: ತಾ. 21 ರಂದು (ಇಂದು) ನಡೆಯಲಿರುವ ನಾಲ್ಕನೇ ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಇಲ್ಲಿನ ಶ್ರೀ ಕಾವೇರಿ ಕಲಾ ಪರಿಷತ್ ಸಭಾಂಗಣದಲ್ಲಿ ಉಚಿತ ಯೋಗ ಶಿಬಿರ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ಆಯುಷ್ ಇಲಾಖೆ ಸಹಯೋಗದಲ್ಲಿ ನವದೆಹಲಿಯ ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಸಂಸ್ಥೆ, ರಾಜ್ಯ ಆರೋಗ್ಯ ಇಲಾಖೆ ಹಾಗೂ ಉಜಿರೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ವತಿಯಿಂದ ಈ ಶಿಬಿರ ಆಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಯೋಗಾಭ್ಯಾಸ, ಪ್ರಾಣಾಯಾಮ ಮತ್ತು ಧ್ಯಾನದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

ಉಜಿರೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಹೆಚ್.ಎನ್. ಐಶ್ವರ್ಯ ಮತ್ತು ಕೆ.ಆರ್. ಸೌಂದರ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದು, ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ಉಚಿತವಾಗಿ ಯೋಗ ಹೇಳಿಕೊಡಲಾಗುತ್ತಿದೆ. ಕುಶಾಲನಗರ ವ್ಯಾಪ್ತಿಯ 200 ಮಂದಿ ಈ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.