ಮಡಿಕೇರಿ, ಜೂ. 23 : ಕಾನೂನಿನ ಅರಿವು ಮತ್ತು ನೆರವು ಪ್ರತಿಯೊಬ್ಬರಿಗೂ ತಲುಪಿದಾಗ ಸಮಾಜದಲ್ಲಿ ಸಮಾನತೆ, ಸಹಬಾಳ್ವೆ, ಸಹೋದರತ್ವ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಬಡವರು, ದುರ್ಬಲರು, ಮಹಿಳೆಯರು ಮತ್ತು ಮಕ್ಕಳು ಹೀಗೆ ಎಲ್ಲರಿಗೂ ಕಾನೂನಿನ ಅರಿವು ಮತ್ತು ನೆರವು ಪಡೆಯುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ ಕಾಡ್ಲೂರು ಸತ್ಯನಾರಾಯಣಾಚಾರ್ಯ ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಗರದ ನ್ಯಾಯಾಲಯ ಆವರಣದಲ್ಲಿ ‘ಕಾನೂನು ಸಾಕ್ಷರತಾ ಆಂದೋಲನ’ ಮೂಲಕ ವಿಶೇಷ “ಕಾನೂನು ಅರಿವು ಕಾರ್ಯಕ್ರಮ”ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಬ್ಬ ಬಡವರು, ದುರ್ಬಲರಿಗೂ ಕಾನೂನಿನ ಸೇವೆಗಳು ಸಿಗುವಂತಾಗಬೇಕು ಎಂಬ ಉದ್ದೇಶದಿಂದ 1987 ರಲ್ಲಿ ಕಾನೂನು ಸೇವಾ ಪ್ರಾಧಿಕಾರವನ್ನು ರಾಷ್ಟ್ರ, ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಆರಂಭಿಸಿತು. ಆ ದಿಸೆಯಲ್ಲಿ ಕಾನೂನು ಇನ್ನಷ್ಟು ಹತ್ತಿರಕ್ಕೆ ತಲುಪಬೇಕು ಎಂಬ ಉದ್ದೇಶದಿಂದ 1995ರಲ್ಲಿ ಕೆಲವು ತಿದ್ದುಪಡಿ ಮಾಡಿ ಮತ್ತಷ್ಟು ಪರಿಣಾಮಕಾರಿಯಾಗಿ ಕಾನೂನು ಸೇವೆಗಳನ್ನು ತಲುಪಿಸಲು ಪ್ರಯತ್ನಿಸ ಲಾಗುತ್ತಿದೆ ಎಂದು ಹೇಳಿದರು.
‘ಸಮಾಜದಲ್ಲಿ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಇಂದಿಗೂ ವಿಶ್ವಾಸವಿದ್ದು, ಅದನ್ನು ಮತ್ತಷ್ಟು ಬಲಪಡಿಸಿಕೊಂಡು ಹೋಗುವದು ಮುಖ್ಯ. ಆ ನಿಟ್ಟಿನಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವಂತಾಗಬೇಕು. ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಶ್ರದ್ಧೆಯಿಂದ ನಿರ್ವಹಿಸಿದರೆ. ಸಮಾಜವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.’
ವಕೀಲರ ಸಂಘದ ಉಪಾಧ್ಯಕ್ಷ ಪಿ.ಯು. ಪ್ರೀತಂ ಮಾತನಾಡಿ, ಕಾನೂನು ನಿಂತ ನೀರಲ್ಲ, ದಿನದಿಂದ ದಿನಕ್ಕೆ ಕಾನೂನು ಬದಲಾಗುತ್ತಿರುತ್ತದೆ. ಆದ್ದರಿಂದ ಕಾನೂನಿನ ಬಗ್ಗೆ ಅರಿವು ಇರಬೇಕು ಎಂದರು.
ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಅರಿವು-ನೆರವು ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.
ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಡಿ.ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ವಿಜಯ ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ವಕೀಲರ ಸಂಘದ ಕಾರ್ಯದರ್ಶಿ ಕಿಶೋರ್, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಪ್ರಭಾಕರ ಮೂರ್ತಿ, ಒಡಿಪಿ ಸಂಸ್ಥೆಯ ಜಾಯ್ಸ್ ಮೇನೆಜಸ್ ಇತರರು ಇದ್ದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಬಿ.ಎಸ್. ಜಯಪ್ಪ ಅವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ಉಪನ್ಯಾಸ ಕಾರ್ಯಕ್ರಮ : ನಗರದ ಸಂತ ಜೋಸೆಫರ ಶಾಲೆಯಲ್ಲಿ ಮಕ್ಕಳಿಗೆ ಬಾಲಸ್ನೇಹಿ ಕಾನೂನು ಸೇವೆಗಳು ಮತ್ತು ಅವುಗಳ ಸಂರಕ್ಷಣಾ ಯೋಜನೆ, ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಕೀಲ ಎಂ.ಎ. ನಿರಂಜನ್ ಉಪನ್ಯಾಸ ನೀಡಿದರು. ಬಳಿಕ ನಗರದ ಶಕ್ತಿ ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕರಿಗೆ ಇರುವ ಕಾನೂನು ಮತ್ತು ಹಕ್ಕುಗಳು ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ವಕೀಲ ಕೆ.ಡಿ.ದಯಾನಂದ ಮಾತನಾಡಿದರು.