ಸೋಮವಾರಪೇಟೆ, ಜೂ. 26: 2017-18ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಅಂಕ ಪಡೆದ ವಿದ್ಯಾರ್ಥಿಗಳನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ಇತ್ತೀಚೆಗೆ ವಿದ್ಯಾರ್ಥಿಗಳು ಕನ್ನಡದಲ್ಲಿ ಸಾಧನೆ ಮಾಡುತ್ತಿರುವದು ಶ್ಲಾಘನೀಯ. ಅದರಲ್ಲೂ ವಿಶೇಷವಾಗಿ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳೂ ಕೂಡ ಕನ್ನಡ ವಿಷಯದಲ್ಲಿ ನೂರಕ್ಕೆ ನೂರು ಸಾಧನೆ ಮಾಡುತ್ತಿರುವದು ಉತ್ತಮ ಬೆಳವಣಿಗೆ ಎಂದು ಪ್ರಶಂಶಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷ ಹಾಗೂ ಹಾಸನ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ. ಜಿ.ಎಸ್. ಪರಮೇಶ್ ಮಾತನಾಡಿ, ಕೊಡಗು ಜಿಲ್ಲೆಯ ಪರಿಸರ ದೇಶದಲ್ಲೇ ಅತ್ಯುತ್ತಮವಾಗಿದ್ದು, ಸಾಹಿತ್ಯ ಕೃಷಿಗೆ ಪ್ರಶಸ್ತವಾದ ತಾಣವಾಗಿದೆ. ಈ ಹಿನ್ನೆಲೆ ಕೊಡಗಿನ ಸಾಹಿತಿಗಳು ಹಾಗೂ ಯುವ ಬರಹಗಾರರಿಗೆ ಇನ್ನಷ್ಟು ಉತ್ತೇಜನ ನೀಡಿದ್ದೇ ಆದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಉನ್ನತ ಸಾಧನೆ ನಿರೀಕ್ಷಿಸಲು ಸಾಧ್ಯ ಎಂದರು.

ಕಳೆದ ಮೂರು ದಶಕಗಳ ಅವಧಿಯಲ್ಲಿ ಕೊಡಗು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆ ಅತ್ಯುತ್ತಮವಾಗಿದೆ. ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಮುಂದಿನ ಪೀಳಿಗೆಯನ್ನು ಪ್ರೋತ್ಸಾಹಿಸುತ್ತಿರುವ ಸಂಸ್ಥೆಯ ಧ್ಯೇಯೋದ್ದೇಶಗಳು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ತಾಲೂಕಿನ ವಿದ್ಯಾರ್ಥಿಗಳಾದ ಪ್ರಮೋದ್, ಆಕಾಶ್, ಹೆಚ್.ಯು. ಮೇಘ, ಬಿ.ಎಸ್. ಮೇಘನಾ, ಜಿ. ಲಿಶಾ, ಸಿ.ಹೆಚ್. ಮುರ್ಷಿದಾ, ಶ್ರಾವ್ಯಾ ರಾಜ್, ಹೆಚ್. ಸುಜನ್, ವಿಲನ್ಯ, ಎಸ್. ಸರಿತಾ ಮತ್ತು ಎ.ಎಸ್. ನಿಹಾರಿಕಾ ಅವರುಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷ ಡಾ. ಜಿ.ಎಸ್. ಪರಮೇಶ್ ಅವರನ್ನು ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್ ಮತ್ತು ಪದಾಧಿಕಾರಿಗಳು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕೋಶಾಧಿಕಾರಿ ಎಸ್.ಎ. ಮುರಳೀಧರ್, ಮಾಧ್ಯಮ ಪ್ರತಿನಿಧಿ ಅಶ್ವಥ್‍ಕುಮಾರ್, ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಕೆ.ಎ. ಆದಮ್, ತಾಲೂಕು ಖಜಾಂಚಿ ಎ.ಪಿ. ವೀರರಾಜ್, ನಿರ್ದೇಶಕ ಹೆಚ್.ಸಿ. ನಾಗೇಶ್ ಮತ್ತಿತರರು ಇದ್ದರು.

ಕನ್ನಡ ಭಾಷೆಯ ಕುರಿತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ರುಬಿನಾ ನಿರ್ವಹಿಸಿದರು. ವಿದ್ಯಾರ್ಥಿನಿ ಚೈತನ್ಯ ಪ್ರಾರ್ಥಿಸಿ, ಕಸಾಪ ನಿರ್ದೇಶಕಿ ಚಂದ್ರಿಕಾ ಸ್ವಾಗತಿಸಿ, ನಿಕಟಪೂರ್ವ ಅಧ್ಯಕ್ಷ ಹೆಚ್.ಜೆ. ಜವರಪ್ಪ ವಂದಿಸಿದರು.